ಉಡುಪಿ, ಮೇ 12 (DaijiworldNews/MS): ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಸಿಗದೆ ಮನನೊಂದು ಇತ್ತೀಚೆಗೆ ಶಿರ್ವದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ವರ್ಷದ ಎಂಬಿಎ ಪದವೀಧರೆ ಸಹನಾ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಮೇ 12ರ ಗುರುವಾರ ಉಡುಪಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ನಲಪಾಡ್, '' 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿತ್ತು. ಉದ್ಯೋಗ ಸೃಷ್ಟಿಯ ಬದಲಾಗಿ 2 ಕೋಟಿ ಮಂದಿ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಭರವಸೆ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ, ಇಂದು ನನ್ನ ತಂಗಿಯೊಬ್ಬಳು ತನ್ನ ವಿದ್ಯಾರ್ಹತೆಗೆ ತಕ್ಕ ಕೆಲಸ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಗೆ ದೀರ್ಘಾಯುಷ್ಯವಿತ್ತು. ಇದಕ್ಕೆ ಬಿಜೆಪಿ ಸರ್ಕಾರವೇ ಹೊಣೆ. ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಅವರ ಕುಟುಂಬಕ್ಕೆ ಸೇರಿದ ಹೆಣ್ಣುಮಗಳು ಇಂತಹ ಕೃತ್ಯ ಎಸಗಿದ್ದರೆ ಸುಮ್ಮನಿರುತ್ತಾರಾ?" ಎಂದು ಪ್ರಶ್ನಿಸಿದರು.
40 ಪರ್ಸೆಂಟ್ ಕಮಿಷನ್ ಹೊರತುಪಡಿಸಿ ಬಿಜೆಪಿ ಸರ್ಕಾರಕ್ಕೆ ರಾಜ್ಯದ ಜನರ ನೋವು, ಸಮಸ್ಯೆಗಳು ಕಾಣುತ್ತಿಲ್ಲ. ಮೃತ ಯುವತಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು. ಇಲ್ಲದಿದ್ದರೆ ಯುವ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಲಿದೆ ಎಂದು ಎಚ್ಚರಿಕೆ ನೀಡಿದ ನಲಪಾಡ್ ಇದೇ ವೇಳೆ ಯುವ ಕಾಂಗ್ರೆಸ್ ವತಿಯಿಂದ ಮೃತ ಯುವತಿಯ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ದೀಪಕ್ ಕೋಟ್ಯಾನ್ ಇನ್ನ, ಉಡುಪಿ ಯುವ ಕಾಂಗ್ರೆಸ್ ಅಧ್ಯಕ್ಷೆ ಭವ್ಯ ಕೆ.ಆರ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುರಯ್ಯ ಅಂಜುಮ್, ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರು ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.