ಉಡುಪಿ, ಮೇ 19 (DaijiworldNews/DB): ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ಶಾಲೆಗಳಿಗೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಡೆಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆ ಹೆಚ್ಚಾದರೆ ಮತ್ತು ನೆರೆ ಭೀತಿ ಇದ್ದಲ್ಲಿ ಶಾಲೆಗಳಿಗೆ ರಜೆ ನೀಡುವಂತೆ ಎಲ್ಲಾ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ. ರಜೆ ನೀಡುವ ನಿರ್ಧಾರವನ್ನು ಆಯಾ ಶಾಲಾ ಆಡಳಿತ ಮಂಡಳಿಯವರೇ ತೆಗೆದುಕೊಳ್ಳುತ್ತಾರೆ ಎಂದರು.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕಳೆದ ಮೂರ್ನಾಲ್ಕು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಗುರುವಾರ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ, ಶಿವಮೊಗ್ಗ ಮುಂತಾದೆಡೆ ಶಾಲೆಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ.