ಮಂಗಳೂರು, ಮೇ 24(DaijiworldNews/SM) ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಮೇ.23ರ ಸೋಮವಾರ ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಸಭೆ ಹಾಗೂ ಜೂನ್ 1ರಂದು ಜಿಲ್ಲೆಗೆ ಮುಖ್ಯಮಂತ್ರಿಯವರ ಭೇಟಿ ಕುರಿತಂತೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಈಗಾಗಲೇ ಜಿಲ್ಲಾಡಳಿತದೊಂದಿಗೆ ಚರ್ಚಿಸಿದ್ದಾರೆ. ಮುಂಗಾರು ಸಂದರ್ಭದಲ್ಲಿ ಆಗಬಹುದಾದ ಅವಘಡಗಳನ್ನು ತಪ್ಪಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲು ದಿನದ 24 ತಾಸು ಕಾರ್ಯನಿರ್ವಹಿಸುವ ವಾರ್ ರೂಂಗಳನ್ನು ಜಿಲ್ಲೆಯ ಇಬ್ಬರು ಸಹಾಯಕ ಆಯುಕ್ತರು ತಕ್ಷಣ ಆರಂಭಿಸಬೇಕು, ಅಲ್ಲಿ ದೂರವಾಣಿ ಸಂಖ್ಯೆ, ಅಧಿಕಾರಿಗಳ ನಿಯೋಜನೆ ಹಾಗೂ ಪರಿಹಾರ ನೀಡುವ ಕೆಲಸಗಳನ್ನು ಮಾಡಬೇಕು.
ಜಿಲ್ಲೆಯನ್ನು ಪ್ರವೇಶಿಸುವ ಚಾರ್ಮಾಡಿ, ಶಿರಾಡಿ ಹಾಗೂ ಸಂಪಾಜೆ ಘಾಟಿಗಳಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೂಡಲೇ ಭೇಟಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಬೇಕು, ಅಗತ್ಯವಿದ್ದಲ್ಲೀ ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಹಾಸನ ಜಿಲ್ಲಾಧಿಕಾರಿಯವರೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.