ಮಂಗಳೂರು, ಮೇ 29 (DaijiworldNews/DB): ಜೂನ್ 1ರಂದು ದ.ಕ. ಜಿಲ್ಲೆಯ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ರೈತ ವಿದ್ಯಾನಿಧಿ ಯೋಜನೆಯ ಸದುಪಯೋಗ ಪಡೆದಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದು, ಸಭಾ ವೇದಿಕೆಗೆ ಫಲಾನುಭವಿಗಳನ್ನು ಕರೆ ತರಲು ಹಾಗೂ ವಾಪಾಸ್ ಕಳುಹಿಸಲು ಸೂಕ್ತ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಭಾನುವಾರ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಫಲಾನುಭವಿ ವಿದ್ಯಾರ್ಥಿಗಳನ್ನು ಕರೆ ತರಲು ಬಸ್ಗಳ ವ್ಯವಸ್ಥೆ ಮಾಡಿಕೊಳ್ಳಬೇಕು, ಇದಕ್ಕಾಗಿ ಸಂಬಂಧಿಸಿದ ಕಾಲೇಜುಗಳಲ್ಲಿ ಬಸ್ಗಳು ಇಲ್ಲದಿದ್ದಲ್ಲಿ ಸ್ಥಳೀಯ ಶಾಸಕರೊಂದಿಗೆ ಸಂಬಂಧಿಸಿದ ಅಧಿಕಾರಿಗಳು ಸಮನ್ವಯ ಮಾಡಿದರೆ ಶಾಸಕರು ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಡುವರು ಎಂದರು.
ವಿದ್ಯಾರ್ಥಿಗಳನ್ನು ಕರೆ ತರುವ ಹಾಗೂ ಅವರನ್ನು ಕಳುಹಿಸಿಕೊಡಲು ವ್ಯವಸ್ಥಿತವಾಗಿ ನಿರ್ವಹಿಸಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸುವಂತೆ ತಿಳಿಸಿದ ಸಚಿವರು, ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಅನುಭವಿ ಉಪನ್ಯಾಸಕರಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಆಯೋಜಿಸುವಂತೆ ಸೂಚನೆ ನೀಡಿದರು.
ಸಂವಾದ ನಡೆಯುವ ವೇದಿಕೆಯ ಸಿದ್ದತೆಗಳನ್ನು ಪರಿಶೀಲಿಸಲು ಭೇಟಿ ನೀಡುವುದಾಗಿ ತಿಳಿಸಿದ ಅವರು, ಮುಖ್ಯಮಂತ್ರಿ ವಿದ್ಯಾ ನಿಧಿ ಯೋಜನೆಯ ಪ್ರಯೋಜನ ಪಡೆದ ವಿವಿಧ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಸಂವಾದದಲ್ಲಿ ಭಾಗವಹಿಸಲು ಅನುಕೂಲವಾಗುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿದರು.
ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಲು ಅಗತ್ಯವಿರುವ ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು, ಸಂಬಂಧಿಸಿದ ಅಧಿಕಾರಿಗಳು ಪಟ್ಟಿ ನೀಡುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮಾತನಾಡಿ, ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು ಹಾಗೂ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವುದಾಗಿ ತಿಳಿಸಿದರು.
ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸ್ಮಾಟ್ ಸಿಟಿ ಎಂಡಿ ಪ್ರಶಾಂತ್ ಕುಮಾರ್ ಮಿಶ್ರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.