ಉಡುಪಿ, ಡಿ 09(SM): ಮಲ್ಪೆ ಮೀನುಗಾರಿಕಾ ಬೋಟ್ ನಾಪತ್ತೆ ವಿಚಾರವನ್ನು ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವಿಸಲಾಗುವುದು ಎಂದು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕ್ಯಾಬಿನೆಟ್ ಸಭೆಯಲ್ಲಿ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಇತರ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಸಚಿವರು ಹೇಳಿದರು.
ಮಹಾರಾಷ್ಟ್ರ ಮತ್ತು ಗೋವಾ ವ್ಯಾಪ್ತಿಯಲ್ಲಿ ಹುಡುಕಾಟ ತೀವ್ರಗೊಳಿಸಲು ಮೀನುಗಾರ ಮುಖಂಡರು ಒತ್ತಾಯಿಸುತ್ತಿದ್ದು, ಅಲ್ಲಿನ ಸರಕಾರಗಳೊಂದಿಗೆ ಉನ್ನತ ಮಟ್ಟದಲ್ಲಿ ಚರ್ಚಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ನಾಡಗೌಡ ತಿಳಿಸಿದ್ದಾರೆ.
ಅಲ್ಲದೆ ನಾಪತ್ತೆಯಾಗಿರುವ ಕೆಲವು ಮೀನುಗಾರರ ಕುಟುಂಬಗಳು ಜೀವನ ನಿರ್ವಹಣೆಗೆ ಸಂಕಷ್ಟ ಪಡುತ್ತಿರುವ ಬಗ್ಗೆ ಸರಕಾರದ ಗಮನಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಾತ್ಕಾಲಿಕವಾಗಿ ಒಂದು ಲಕ್ಷ ರೂಪಾಯಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ರಘುಪತಿ ಭಟ್ , ಲಾಲಾಜಿ ಮೆಂಡನ್, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಸ್ ಪಿ ಲಕ್ಷ್ಮಣ್ ನಿಂಬಾಳ್ಕರ್, ಮೀನುಗಾರ ಮುಖಂಡರು ಭಾಗವಹಿಸಿದ್ದರು.