ಉಡುಪಿ, ಜೂ 11 (DaijiworldNews/HR): ಜೂನ್ 8 ರಂದು ರಾತ್ರಿ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯ 38 ವರ್ಷ ಪ್ರಾಯದ ನವೀನ್ ಎಂಬುವರಿಗೆ ರಸ್ತೆ ಅಪಘಾತವಾಗಿದ್ದು, ರಸ್ತೆ ಅಪಘಾತದಿಂದ ತೀವ್ರ ತರದ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಜೂನ್ 9ರಂದು ಬೆಳಿಗ್ಗೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯಕೀಯ ತಂಡವು ವೈದ್ಯರು ನವೀನ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ಮಾನವ ಅಂಗಾಂಗ ಕಸಿ ಕಾಯ್ದೆ 1994ರ ಅನುಸಾರ ನವೀನ್ ಅವರನ್ನು 6 ಗಂಟೆಗಳ ಅಂತರದಲ್ಲಿ ಎರಡು ಬಾರಿ ಪರಿಶೀಲಿಸಲಾಯಿತು. ಮೊದಲನೆಯದಾಗಿ ಜೂನ್ 10 ರಂದು ಸಂಜೆ 5.00 ಗಂಟೆಗೆ ಮತ್ತು ಎರಡನೆಯದಾಗಿ ಅದೇ ದಿನ ರಾತ್ರಿ 11.35 ಕ್ಕೆ ವೈದ್ಯಕೀಯ ಪರಿಶೀಲನೆ ನಡೆಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು.
ನವೀನ್ ಅವರ ಪತ್ನಿ ಮಲ್ಲಿಕಾ ಮತ್ತು ಅವರ ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು.
ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳನ್ನು ತೆಗೆದು 6 ಜನರ ಜೀವ ಉಳಿಸಲು ಸಹಾಯವಾಗಿದೆ. ಜೀವನ ಸಾರ್ಥಕತೆ ಶಿಷ್ಟಾಚಾರ ಮತ್ತು ನಿರ್ಧಾರಗಳ ಪ್ರಕಾರ, ನೋಂದಾಯಿತ ರೋಗಿಗಳಿಗೆ ಎರಡು ಕಾರ್ನಿಯಾಗಳು ಮತ್ತು ಒಂದು ಮೂತ್ರಪಿಂಡ ಮತ್ತು ಚರ್ಮ ವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಬಳಸಲಾಯಿತು. ಯಕೃತ್ತು ಮತ್ತು ಒಂದು ಕಿಡ್ನಿಯನ್ನು ಕೆಎಂಸಿ ಆಸ್ಪತ್ರೆ ಅಂಬೇಡ್ಕರ್ ಸರ್ಕಲ್ ಮಂಗಳೂರಿಗೆ ಕಳುಹಿಸಿಕೊಡಲಾಯಿತು.
ನವೀನ್ ಅವರ ಪತ್ನಿ ಮತ್ತು ಕುಟುಂಬ ಸದಸ್ಯರು ಅಂಗದಾನ ಒಂದು ಪುಣ್ಯದ ಕೆಲಸ. ನವೀನ್ ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ ಎಂದು ತಿಳಿಸಿದ್ದಾರೆ.
ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ "ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು, ಅತ್ಯಂತ ಮಹತ್ವವನ್ನು ಪಡೆದಿದೆ. ಜನರು ಈ ರೀತಿಯ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹಿಸಬೇಕು" ಎಂದು ತಿಳಿಸಿ ಅಂಗ ದಾನ ಮಾಡಲು ನಿರ್ಧರಿಸಿದ ಶ್ರೀನಿವಾಸ್ ಕುಟುಂಬಕ್ಕೆ ಕ್ರತಜ್ಞತೆ ಸಲ್ಲಿಸಿದರು. "ಅಂಗಾಂಗ ದಾನದ ಬಗ್ಗೆ ಸಾರ್ವಜನಿಕರಲ್ಲಿ ದಿನದಿಂದ ದಿನಕ್ಕೆ ಜಾಗೃತಿ ಹೆಚ್ಚಾಗುತ್ತಿರುವುದು ಒಳ್ಳೆಯ ಸಂಗತಿ" ಎಂದು ಅಭಿಪ್ರಾಯಪಟ್ಟರು.
ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ವರ್ಗಾಯಿಸಲಾಯಿತು.