ಉಡುಪಿ, ಜೂ 13 (DaijiworldNews/HR): ಕರಾವಳಿ ರಾಜಕೀಯದ ಭೀಷ್ಮ ಎಂದೇ ಖ್ಯಾತರಾಗಿದ್ದ ಹಿರಿಯ ರಾಜಕಾರಣಿ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ) ಅವರು ಅಸೌಖ್ಯದಿಂದ ಇಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೃಷಿಕ ಕುಟುಂಬದಲ್ಲಿ 1929ರ ಅ.1ರಂದು ಜನಿಸಿದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರ ತಂದೆ ಕೃಷ್ಣರಾಯ ಕೊಡ್ಗಿ ಸ್ವಾತಂತ್ರ್ಯ ಹೋರಾಟಗಾರರು. ಕಾನೂನು ಪದವಿ ಪಡೆದ ಕೊಡ್ಗಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಿಟ್ಟೂರು ಶ್ರೀನಿವಾಸ ರಾವ್ ಅವರೊಂದಿಗೆ ಸ್ವಲ್ಪ ಸಮಯ ವಕೀಲರಾಗಿ ಕೆಲಸ ನಿರ್ವಹಿಸಿ ಬಳಿಕ ಕೃಷಿಯಲ್ಲಿಯೇ ತಮ್ಮನ್ನು ಪರಿಪೂರ್ಣವಾಗಿ ತೊಡಗಿಸಿಕೊಂಡವರಾಗಿದ್ದಾರೆ.
ಇನ್ನು ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಎಂಟು ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಮೃತರು ಐವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.