ಮಂಗಳೂರು, ಜೂ 13 (DaijiworldNews/DB): ಇಲಾಖೆಗಳ ನಡುವಿನ ಸಮನ್ವಯತೆಯ ಕೊರತೆಯಿಂದಾಗಿ ಮಂಗಳೂರು ಮಹಾನಗರ ಪಾಲಿಕೆ ಕೈಗೊಂಡಿರುವ ಕಾಮಗಾರಿಗಳ ವೇಗ ಕಡಿಮೆಯಾಗಿದೆ. ಇದನ್ನು ಹೋಗಲಾಡಿಸುವುದಕ್ಕಾಗಿ ಜೂನ್ 23 ಅಥವಾ 24ರಂದು .ರಾಜ್ಯ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಪಾಲಿಕೆ ಅಧಿಕಾರಿಗಳು ಮತ್ತು ಕಾರ್ಪೋರೇಟರ್ಗಳ ಸಭೆ ನಡೆಸಿ ಸೋಮವಾರ ಅವರು ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಕಾಮಗಾರಿಗಳು ವೇಗ ಪಡೆದುಕೊಳ್ಳಬೇಕು. ಆದರೆ ಇಲಾಖೆಗಳ ನಡುವಿನ ಸಮನ್ವಯತೆಯ ಕೊರತೆಯಿಂದಾಗಿ ಇದು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದಿಂದ ಕಾಮಗಾರಿಗಾಗಿ ಬಿಡುಗಡೆಗೊಂಡ ಅನುದಾನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು. ಆಮೆಗತಿಯಲ್ಲಿ ಕಾಮಗಾರಿ ಸಾಗುತ್ತಿರುವುದರಿಂದ ಸಾರ್ವಜನಿಕರು ತುಂಬಾ ಸಮಸ್ಯೆ ಅನುಭವಿಸುತ್ತಿದ್ದಾರೆ. ಕೆಲಸ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಲೋಪ ಸರಿಪಡಿಸುವ ಕೆಲಸ ಮಾಡಲಾಗುವುದು ಎಂದವರು ಇದೇ ವೇಳೆ ತಿಳಿಸಿದರು.
15ನೇ ಹಣಕಾಸು ಆಯೋಗದ ಅನುದಾನ ಮತ್ತು ಮಹಾತ್ಮ ಗಾಂಧಿ ವಿಕಾಸ ಯೋಜನೆಯ ಅನುದಾನ ಈಗಾಗಲೇ ಪಾಲಿಕೆಗೆ ತಲುಪಿದೆ. ಇದನ್ನು ಸದ್ವಿನಿಯೋಗಿಸಿಕೊಳ್ಳಲು ಈಗ ನಡೆಯುತ್ತಿರುವ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಬೇಕು ಎಂದ ಅವರು, ಸದ್ಯ ಮಳೆಗಾಲಕ್ಕೆ ಬೇಕಾದ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲು ಅಧಿಕಾರಿಗಳು ತಯಾರಾಗಿರಬೇಕು. ಒಳಚರಂಡಿಗಳಲ್ಲಿ ನೀರು ಸರಿಯಾಗಿ ಹರಿದು ಹೋಗುವ ವ್ಯವಸ್ಥೆ ಮಾಡಬೇಕು ಎಂದು ಇದೇ ವೇಳೆ ಸೂಚಿಸಿದರು.
ಕಂಕನಾಡಿ, ಕದ್ರಿ, ಸುರತ್ಕಲ್ ಮಾರುಕಟ್ಟೆಗಳ ಕಾಮಗಾರಿ ಶೀಘ್ರ ಮುಗಿಸಬೇಕು. ಡಿಸೆಂಬರ್ನಲ್ಲಿ ಈ ಮೂರೂ ಮಾರುಕಟ್ಟೆಗಳು ಉದ್ಘಾಟನೆಗೆ ಸಿದ್ದವಾಗಬೇಕು. ಅಲ್ಲದೆ, ಸುರತ್ಕಲ್ನ ಇಡ್ಯಾದಲ್ಲಿ ನಿರ್ಮಾಣಗೊಂಡಿರುವ 600 ಮನೆಗಳನ್ನು ಶೀಘ್ರ ಫಲಾನುಭವಿಗಳಿಗೆ ಹಸ್ತಾಂತರಿಸಬೇಕು ಎಂದು ಇದೇ ವೇಳೆ ಸಂಬಂಧಪಟ್ಟವರಿಗೆ ನಿರ್ದೇಶಿಸಿದರು.
ಶಾಸಕ ಡಾ. ವೈ. ಭರತ್ ಶೆಟ್ಟಿ ಉಪಸ್ಥಿತರಿದ್ದರು.