ಮಂಗಳೂರು,ಜ 16(MSP): ಭಾರತ ಚುನಾವಣಾ ಆಯೋಗದ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪರಿಷ್ಕೃತ ಮತದಾರರ ಪಟ್ಟಿ - 2019 ನ್ನು ಜನವರಿ 16ರ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಬಿಡುಗಡೆ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು ಪರಿಷ್ಕೃತ ಮತದಾರರ ಪಟ್ಟಿಗೆ ಕಳೆದ ನವೆಂಬರ್ ತಿಂಗಳಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆ ಹಾಗೂ ಕಾಲೇಜುಗಳಲ್ಲಿ ಹಮ್ಮಿಕೊಂಡ ಮಿಂಚಿನ ನೋಂದಣಿ ಹಾಗೂ ವಿಶೇಷ ನೋಂದಣಿ 21,292 ಯುವ ಮತದಾರರು ಸೇರ್ಪಡೆಯಾಗಿದ್ದಾರೆ. ಇಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಂತೆ ದ.ಕ. ಜಿಲ್ಲೆಯಲ್ಲಿ ಒಟ್ಟು 16,97417 ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.
ಇದಲ್ಲದೇ ಜ.೨೫ ರಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುವುದು. ನಗರದಲ್ಲೂ ಪುರಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮತದಾರರ ಚೀಟಿಯನ್ನು ನೀಡಲಾಗುವುದು ಎಂದರು.
ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಈ ಹಿಂದೆ 1,790 ಮತಗಟ್ಟಿಗಳಿದ್ದು, ಹಾಲಿ 71 ಹೊಸ ಮತಗಟ್ಟೆಗಳ ರಚಿಸಲಾಗಿದೆ. ಹೀಗಾಗಿ ಒಟ್ಟು ಮತಗಟ್ಟೆಗಳ ಸಂಖ್ಯೆ 1,861 ಆಗಿರುತ್ತದೆ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿದ್ದ ಹೆಚ್ಚುವರಿ ಮತಗಟ್ಟೆಗಳನ್ನು ನೂತನ ಮತಗಟ್ಟೆಗಳಾಗಿ ಸೇರ್ಪಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಮತದಾರರ ಸೇರ್ಪಡೆ ಹಾಗೂ ಪಟ್ಟಿಯಿಂದ ಹೆಸರನ್ನು ಕೈಬಿಡುವ ಪ್ರಕ್ರಿಯೆ ಮುಂದಿನ ಚುನಾವಣೆ ಘೋಷಣೆವರೆಗೆ ಮುಂದುವರಿಯಲಿದ್ದು, ಅರ್ಜಿ ಸಲ್ಲಿಸಲು ಅಥವಾ ಆಕ್ಷೇಪ ಸಲ್ಲಿಸಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಈ ಸಂದರ್ಭ ತಿಳಿಸಿದರು.