ಮಂಗಳೂರು,ಜೂ 23 (DaijiworldNews/MS): ಕರ್ನಾಟಕ ನಗರ ಮೂಲಸೌಕರ್ಯ ಮತ್ತು ಹಣಕಾಸು ನಿಗಮದ ವತಿಯಿಂದ ಮಂಗಳೂರು ನಗರಕ್ಕೆ 24/7 ನೀರು ಸರಬರಾಜು ಯೋಜನೆಯ ಅನುಷ್ಠಾನದ ಪ್ರಾಯೋಗಿಕ ಹಂತವನ್ನು ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಸೂಚಿಸಿದರು.
ಅವರು ಜೂ.22ರ ಬುಧವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರಕ್ಕೆ ದಿನದ 24 ತಾಸು ನೀರು ಪೂರೈಸುವ ಯೋಜನೆಯ ಕಾಮಗಾರಿಗಳು ವೇಗ ಪಡೆಯಬೇಕು, ಸಂಬಂಧಿಸಿದ ಇಲಾಖೆಗಳು ಹಾಗೂ ಅಧಿಕಾರಿಗಳ ನಡುವೆ ಸಮನ್ವಯ ಸಾಧಿಸಿ ಈ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಮಂಗಳೂರು ನಗರದ ಜನತೆಗೆ ಶೀಘ್ರವಾಗಿ 24/7 ಕುಡಿಯುವ ನೀರಿನ ಯೋಜನೆಯ ಲಾಭ ದೊರೆಯುವಂತಾಗಬೇಕು, ಆ ದಿಸೆಯಲ್ಲಿ ಪ್ರಾಯೋಗಿಕ ಯೋಜನೆ ಜುಲೈ ಅಂತ್ಯದೊಳಗೆ ಪೂರ್ಣಗೊಳ್ಳಬೇಕು ಎಂದರು.
54 ಹಂತಗಳಲ್ಲಿ ಕೈಗೊಂಡಿರುವ ಈ ಕಾಮಗಾರಿಗಳನ್ನು ಹಂತ ಹಂತವಾಗಿ ಪೂರ್ಣಗಳಿಸುವಂತೆ ಸಲಹೆ ನೀಡಿದ ಅವರು, ಝೋನ್ 18ಸಿ ಬೆಂದ್ರು ಹಾಗೂ ಝೋನ್ 20ಎ ಪಡೀಲ್ನಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಹೆಚ್ಚು ಕಾರ್ಮಿಕರನ್ನು ಬಳಸಿಕೊಂಡು ಬಾಕಿ ಉಳಿದ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಅವರು ತಿಳಿಸಿದರು.
ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳಾ ರಾವ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸ್ಮಾರ್ಟ್ ಸಿಟಿ ಎಂಡಿ ಪ್ರಶಾಂತ್ ಮಿಶ್ರಾ ವೇದಿಕೆಯಲ್ಲಿದ್ದರು.
ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಕರ್ನಾಟಕ ನಗರ ಮೂಲಸೌಕರ್ಯ ಮತ್ತು ಹಣಕಾಸು ನಿಗಮದ ಮುಖ್ಯ ಎಂಜಿನಿಯರ್ ಕ್ಯಾ. ದೊಡ್ಡಿಹಾಳ್, ಸ್ಮಾರ್ಟ್ ಸಿಟಿ ಮುಖ್ಯ ಎಂಜಿನಿಯರ್ ಶ್ರೀನಿವಾಸನ್, ಕರ್ನಾಟಕ ನಗರ ಮೂಲಸೌಕರ್ಯ ಮತ್ತು ಹಣಕಾಸು ನಿಗಮದ ಜೆಎಂಡಿ ಶಿಲ್ಪ, ಗೇಲ್ ಇಂಡಿಯಾದ ಜನರಲ್ ಮ್ಯಾನೇಜರ್ ಯು.ಸಿ. ಸಿಂಗ್, ಡಿಜಿಎಂ ಪಿ.ಜಿ. ಜಾಯ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿದ್ದರು.