ಕಾಸರಗೋಡು, ಜು 05 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ತೀರ ಪ್ರದೇಶದ ಹಲವಾರು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಉಪ್ಪಳದಲ್ಲಿ ಇಂದು ಬೆಳಿಗ್ಗೆ ಮನೆಯೊಂದಕ್ಕೆ ನೆರೆ ನೀರು ನುಗ್ಗಿದ್ದು, ಮನೆಯಲ್ಲಿದ್ದವರನ್ನು ಉಪ್ಪಳದಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು. ಹೊಸದುರ್ಗ ತಾಲೂಕಿನಲ್ಲಿ ಗಾಳಿ ಮಳೆಗೆ ನಾಲ್ಕು ಮನೆಗಳು ಭಾಗಶಃ ಹಾನಿ ಗೊಂಡಿದೆ. ತಲಪಾಡಿ ಕಾಸರಗೋಡು ನಡುವಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ನೀರು ಹರಿಯಲು ವ್ಯವಸ್ಥೆ ಇಲ್ಲದೆ ರಸ್ತೆಯಲ್ಲೇ ನೀರು ತುಂಬಿ ಕೊಂಡಿದ್ದು, ಸಂಚಾರಕ್ಕೂ ಅಡ್ಡಿಯಾಗಿದೆ.
ಕರಂದಕ್ಕಾಡ್, ಮೊಗ್ರಾಲ್, ಹೊಸಂಗಡಿ ಹಾಗೂ ಇನ್ನಿತರ ಕಡೆಗಳಲ್ಲಿ ನೀರು ರಸ್ತೆಯಲ್ಲೇ ತುಂಬಿಕೊಂಡಿದ್ದು, ತಗ್ಗು ಪ್ರದೇಶದ ನೂರಾರು ಮನೆಗಳಿಗೆ ನೀರು ನುಗ್ಗಿದೆ. ಇವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.
ಇನ್ನು ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಜಿಲ್ಲೆಯ ಶಾಲೆಗಳಿಗೆ ರಜೆ ನೀಡಲಾಗಿದೆ.