ಮಣಿಪಾಲ, ಜು 13 (DaijiworldNews/DB): ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ನೆರೆಹಾನಿ ತಡೆಯುವ ನಿಟ್ಟಿನಲ್ಲಿ ಹೊಸ ತಾಂತ್ರಿಕತೆ ಬಗ್ಗೆ ಅಧ್ಯಯನಕ್ಕೆ ನಡೆಸುವುದಕ್ಕಾಗಿ ನಾಲ್ಕು ಸಂಸ್ಥೆಗಳನ್ನು ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗೌರವ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಬುಧವಾರ ಮಾತನಾಡಿದ ಅವರು, ಮೂರು ಜಿಲ್ಲೆಗಳಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರೊಂದಿಗೆ ಸಭೆ ನಡೆಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಮಳೆಗಾಲದ ಸಮಸ್ಯೆಗಳನ್ನು ಎದುರಿಸಲು ಬೇಕಾದ ಅಗತ್ಯ ಕ್ರಮಗಳ ಕುರಿತು ಮುನ್ನೆಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ ಎಂದರು.
ಕಡಲ್ಕೊರೆತ ಬಾಧಿತ ಮರವಂತೆ, ಕಾಪು ಮುಂತಾದ ಬೀಚ್ಗಳಿಗೆ ಭೇಟಿ ನೀಡಲಾಗುವುದು. ಇದಾದ ಬಳಿಕ ಸಮಸ್ಯೆಗಳನ್ನು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗುವುದು. ಅಲ್ಲದೆ ಹಣಕಾಸಿನ ನೆರವನ್ನೂ ಒದಗಿಸಲಾಗುವುದು. ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಿಗೂ ಶೀಘ್ರ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.