ಮಂಗಳೂರು, ಜು 30(DaijiworldNews/HR): ದ.ಕ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಅಹಿತಕರ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಮಟ್ಟದ ಶಾಂತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದ್ದು, ಪೊಲೀಸ್ ಇಲಾಖೆ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದು, ನಿಜವಾದ ಆರೋಪಿಗಳನ್ನು ಬಂಧಿಸಲಾಗುವುದು. ಅನಗತ್ಯವಾಗಿ ಯಾರನ್ನೂ ಬಂಧಿಸುವುದಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಶಾಂತಿ ಸಮಿತಿ ಸಭೆಯ ಬಳಿಕ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿರುವ ಎರಡೂ ಕೊಲೆಗಳ ಹಿಂದಿನ ನಿಜವಾದ ಆರೋಪಿಗಳನ್ನು ಬಂಧಿಸುತ್ತೇವೆ. ಶಾಂತಿ ಸಮಿತಿ ಸಭೆಯನ್ನು ಪ್ರತಿ ಠಾಣೆ ಹಾಗೂ ಜಿಲ್ಲಾ ಮಟ್ಟದಲ್ಲಿ ನಿರಂತರವಾಗಿ ನಡೆಸುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ಜನರು ಸಲಹೆ ನೀಡಿದರು. ಶಾಂತಿ ಸಭೆಗಳನ್ನು ಪರಿಣಾಮಕಾರಿಯಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸಮಿತಿ ಸಭೆಗಳಿಗೆ ಪ್ರಾಮುಖ್ಯತೆ ನೀಡಬೇಕು ಎಂದರು.
ಇನ್ನು ಡ್ರಗ್ಸ್ ಸೇವಿಸಿದ ನಂತರ ಕೆಲವು ಯುವಕರು ಇಂತಹ ಅಪರಾಧಗಳಲ್ಲಿ ಭಾಗಿಯಾಗುತ್ತಿದ್ದಾರೆ. ಗಾಂಜಾ ಹಾವಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಮ್ಮ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಪೋಸ್ಟ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೆಲವು ಮಾಧ್ಯಮಗಳು ಪದೇ ಪದೇ ಗಂಭೀರ ಅಪರಾಧಗಳನ್ನು ತೋರಿಸುತ್ತಲೇ ಇರುತ್ತವೆ ಮತ್ತು ಜಿಲ್ಲೆಯ ಬಗ್ಗೆ ಕೆಟ್ಟ ಅಭಿಪ್ರಾಯವನ್ನು ಸೃಷ್ಟಿಸುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ರಚಿಸಲು ಸೂಚಿಸಿದ್ದು, ಅಂತಹ ಸ್ಥಳಗಳಲ್ಲಿ ನಾವು ಕೆಎಸ್ಆರ್ಪಿ ಪಡೆಗಳನ್ನು ನಿಯೋಜಿಸುತ್ತೇವೆ ಎಂದು ಹೇಳಿದರು.
ಶಾಂತಿ ಸಮಿತಿ ಸಭೆಗೆ ರಾಜಕೀಯ ಪ್ರತಿನಿಧಿಗಳ ಗೈರು ಹಾಜರಿ ಕುರಿತು ಮಾಧ್ಯಮದವರು ಪ್ರಶ್ನಿಸಿದಾಗ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಇರುವುದರಿಂದ ಸಭೆ ನಡೆಸಿದ್ದೇವೆ, ಶಾಂತಿ ಸಮಿತಿ ಸಭೆಗಳ ಸರಣಿ ನಡೆಯಲಿದೆ. ಮುಂಬರುವ ದಿನಗಳಲ್ಲಿ ರಾಜಕೀಯ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ಒಂದು ವಾರದೊಳಗೆ ಅಧಿಕಾರಿಗಳು ಮತ್ತು ಪ್ರತಿನಿಧಿಗಳು ಮತ್ತೊಮ್ಮೆ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.