ಮಂಗಳೂರು, ಆ 06 (DaijiworldNews/DB): ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ರಾಷ್ಟ್ರಧ್ವಜ ಮಾರಾಟಕ್ಕೆ ಆ. 6ರ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯತ್ ಒಕ್ಕೂಟ ,ರಾಯಿ ಗ್ರಾಮ ಪಂಚಾಯತ್ ಸದಸ್ಯರು ತಯಾರಿಸಿದ ರಾಷ್ಟ್ರ ಧ್ವಜಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯದ ಅಮೃತಮಹೋತ್ಸವ ಹಿನ್ನೆಲೆಯಲ್ಲಿ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ಆ ದಿನವನ್ನು ಸಂಭ್ರಮವಾಗಿಸಬೇಕೆಂಬ ಉದ್ದೇಶದಿಂದ ಜಿಲ್ಲೆಯಲ್ಲಿ ಆರು ಲಕ್ಷ ಧ್ವಜ ವಿತರಣೆ ನಡೆಯಲಿದೆ. ಇದಕ್ಕಾಗಿ ಸ್ವಸಹಾಯ ಸಂಘಗಳ ಸಹಕಾರ ಪಡೆದುಕೊಳ್ಳಲಾಗಿದೆ. ಅನೇಕ ಸಂಘಸಂಸ್ಥೆಗಳು ಸ್ವಯಂಪ್ರೇರಿತವಾಗಿ ಮುಂದೆ ಬಂದಿವೆ. ಜಿಲ್ಲೆಯ ಜನರು ಆ. ೧೩ರಿಂದ ೧೫ರವರೆಗೆ ತಮ್ಮ ತಮ್ಮ ಮನೆಗಳಲ್ಲಿ, ವ್ಯಾಪಾರ ಸ್ಥಳಗಳಲ್ಲಿ ಧ್ವಜಗಳನ್ನು ಹಾರಿಸುವ ಮೂಲಕ ಅಮೃತ ಮಹೋತ್ಸವವನ್ನು ಸಂಭ್ರಮಿಸೋಣ. ಗ್ರಾಮ ಪಂಚಾಯತ್ಗಳು, ನ್ಯಾಯಬೆಲೆ ಅಂಗಡಿಗಳ ಮೂಲಕವೂ ಧ್ವಜ ಮಾರಾಟಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.
ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕೆ.ಎಸ್.ಆರ್.ಟಿ.ಸಿ. ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್ ಮತ್ತಿತರರು ಉಪಸ್ಥಿತರಿದ್ದರು.