ಮಂಗಳೂರು, ಆ 08 (DaijiworldNews/SM): ಸರಣಿ ಕೊಲೆಗಳ ಬಳಿಕ ದ.ಕ.ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಆಗಸ್ಟ್ 14ರ ತನಕ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ನಡುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ವಿನಾಯಿತಿ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಆ.14ರವರೆಗೆ ಸೆ.144 ಸಿಆರ್ಪಿಸಿ ಅನ್ವಯ ವಿಧಿಸಲಾಗಿರುವ ನಿಷೇಧಾಜ್ಞೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಗೆ ವಿನಾಯಿತಿ ನೀಡಲಾಗಿದೆ.
75ನೇ ಸ್ವಾತಂತ್ರ್ಯ ವರ್ಷಾಚರಣೆಯ ಅಂಗವಾಗಿ ಅಮೃತ ಮಹೋತ್ಸವವನ್ನು ನಾನಾ ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ಸಂಭ್ರಮದಿಂದ ಆಚರಿಸಲಿರುವುದರಿಂದ ದ.ಕ. ಜಿಲ್ಲಾ ಎಸ್ಪಿ ಮತ್ತು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ನಲ್ಲಿ ವಿನಾಯಿತಿ ನೀಡಲಾಗಿದೆ. ಆದರೆ ಸಂಘಟಕರು ಅಮೃತ ಮಹೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ಸ್ಥಳೀಯಾಡಳಿತದಿಂದ ಅನುಮತಿ ಪಡೆದುಕೊಳ್ಳಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮತ್ತು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.