ಮಂಗಳೂರು, ಆ 16 (DaijiworldNews/MS): ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ(ಎನ್ ಐ ಎ) ನವದೆಹಲಿಯಲ್ಲಿ ಎಫ್ ಐ ಆರ್ ದಾಖಲಿಸಿಕೊಂಡಿದೆ. ಬೆಂಗಳೂರು ಇನ್ ಸ್ಪೆಕ್ಟರ್ ಷಣ್ಮುಗಂ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಜು.27 ರಂದು ದಾಖಲಿಸಿದ್ದ ಎಫ್ ಐ ಆರ್ ಮುಂದಿಟ್ಟುಕೊಂಡು ಎನ್ ಐ ಎ ನವದೆಹಲಿ ಎಸ್ಪಿ ಅವರು ಎನ್ ಐ ಎ ಕಾಯ್ದೆ 2008 ರ ಪ್ರಕಾರ ಪ್ರತ್ಯೇಕ ಕೇಸು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದಲೇ ಪ್ರವೀಣ್ ಅವರನ್ನು ಕೊಲ್ಲಲು ಸಂಚು ರೂಪಿಸಲಾಗಿತ್ತು ಎಂದು ಎನ್ಐಎ ಎಫ್ಐಆರ್ನಲ್ಲಿ ಉಲ್ಲೇಖಿಸಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.
ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ:
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಮೂವರು ಪ್ರಮುಖ ಆರೋಪಿಗಳನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪೊಲೀಸ್ ಕಸ್ಟಡಿಯಲ್ಲಿದ್ದ ಪ್ರಕರಣದ ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿಯಾಝ್ ಅಂಕತಡ್ಕ, ಬಶೀರ್ ಎಂಬವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಆ.24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
ಆ.11ರಂದು ಬಂಧಿಸಲಾದ ಇವರನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿತ್ತು.
ಪೊಲೀಸರು ಆರೋಪಿಗಳನ್ನು ಕಸ್ಟಡಿಗೆ ಪಡೆದು ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಪೊಲೀಸ್ ಕಸ್ಟಡಿಯಲ್ಲಿದ್ದ ವೇಳೆ ಆರೋಪಿಗಳನ್ನು ವಿವಿಧ ಕಡೆಗಳಿಗೆ ಕರೆದೊಯ್ದು ಮಹಜರು ಮಾಡಲಾಗಿದೆ ಎಂದು ತಿಳಿದುಬಂದಿದೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಈವರೆಗೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ.