ಮಂಗಳೂರು, ಆ 20 (DaijiworldNews/MS): ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು, ಇಲ್ಲಿ ಪೊಲೀಸರ ಸಹಕಾರ ಪಡೆಯಬೇಕು, ಹಾಗೂ ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಹಾಗೂ ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು, ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್ಗಳ ಸಭೆ ಕರೆಯಲಾಗುವುದು ಎಂದರು.
ಹೈಕೋರ್ಟ್ನ ಆದೇಶ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ವಯ ಡಿಜೆ ಸೆಟ್ ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಈ ಬಗ್ಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಿಭಾಯಿಸಬೇಕಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಅವುಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಮಂಗಳೂರು ನಗರ ವ್ಯಾಪ್ತಿಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರು, ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್ಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದೆ ಅವರು ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಪರಿಸರ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಮಹೇಶ್ ಕುಮಾರ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಲಿಂಗರಾಜು, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಹರೀಶ್ ಕುಮಾರ್, ತಹಶೀಲ್ದಾರ್ ಗಳು, ಕಂದಾಯ ಅಧಿಕಾರಿಗಳು ಮತ್ತು ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.