ಮಂಗಳೂರು, ಆ 31 (DijiworldNews/HR): ನವ ಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಮ್ಆರ್ಪಿಎಲ್ನ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಸಮಾರಂಭ ಹಾಗೂ ನಗರದ ಗೋಲ್ಡ್ ಫಿಂಚ್ ಮೈದಾನದಲ್ಲಿ ಏರ್ಪಡಿಸಲಾಗಿರುವ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲು ದೇಶದ ಪ್ರಧಾನ ಮಂತ್ರಿಗಳು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಂತಿಮ ಅಂತದ ಸಿದ್ಧತೆಗಳನ್ನು ಸೂಕ್ತವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮಕ್ಕೆ ನಿಯೋಜಿಸಲಾದ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆ.30ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯಾದ್ಯಂತ ಸಹಸ್ರಾರು ಫಲಾನುಭವಿಗಳು ಆಗಮಿಸಲಿದ್ದು, ಅವರನ್ನು ಕರೆತರಲು ಸೂಕ್ತ ಸಾರಿಗೆ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು, ವೇದಿಕೆ ಕಾರ್ಯಕ್ರಮದ ಬಳಿ ಅವರು ಆಗಮಿಸಲು ಅಗತ್ಯ ವ್ಯವಸ್ಥೆಗಳಾಗಬೇಕು, ಪಾರ್ಕಿಂಗ್ ವ್ಯವಸ್ಥೆಗಳ ಬಗ್ಗೆ ಆಗಮಿಸಿದ ಫಲಾನುಭವಿಗಳಿಗೆ ಅಗತ್ಯ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ದೂರದಿಂದ ಆಗಮಿಸುವ ಫಲಾನುಭವಿಗಳಿಗೆ ಊಟೋಪಚಾರದ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು, ಕುಡಿಯುವ ನೀರಿನ ಪೂರೈಕೆ ಹಾಗೂ ಇತರೆ ಅಗತ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುವಂತೆ ಅವರು ಸೂಚನೆ ನೀಡಿದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ನವ ಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷರಾದ ಎ.ವಿ. ರಮಣ, ಎಂಆರ್ಪಿಎಲ್ ನಿರ್ದೇಶಕ ವೆಂಕಟೇಶ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ., ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.