ಮಂಗಳೂರು, ಸೆ 01 (DaijiworldNews/SM): ಕರ್ನಾಟಕದ ಕರಾವಳಿ ಭಾಗಕ್ಕೆ ಕೇಂದ್ರ ಸರ್ಕಾರದಿಂದ ನಾನಾ ಹೊಸ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನ ಕುಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ಸೆಪ್ಟೆಂಬರ್ 2 ರಂದು ನೆರವೇರಿಸಲಿದ್ದಾರೆ.
ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯ ಹೊಸ ಯುಗಕ್ಕೆ ನಾಂದಿ ಹಾಡಲಾಗುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೂ. 3,800 ಕೋಟಿ ಮೊತ್ತದ ಒಟ್ಟು 8 ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ, ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವರಾದ ಸರ್ಬಾನಂದ್ ಸೊನೊವಾಲ್, ಕೇಂದ್ರ ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೊ ನಾಯಕ್, ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶಂತನು ಠಾಕೂರ್ ಸೇರಿದಂತೆ ರಾಜ್ಯದ ಸಚಿವರು ಸಹ ಭಾಗವಹಿಸಲಿದ್ದು ಕಾರ್ಯಕ್ರಮವನ್ನು ಡಿಡಿ ನ್ಯೂಸ್ನಲ್ಲಿ ನೇರ ಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ.