ಉಡುಪಿ, ಅ 03 (DaijiworldNews/DB): ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿಂತೆ 43 ವಿದ್ಯಾರ್ಥಿಗಳ ಮೇಲೆ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆಪ್ಟಂಬರ್ 27ರಿಂದ ಅಕ್ಟೋಬರ್ 1ರ ನಡುವೆ ನಡೆದ ಕಾರ್ಯಾಚರಣೆಯಲ್ಲಿ ಈ ಪ್ರಕರಣಗಳನ್ನು ದಾಖಲಿಸಲಾಗಿದೆ.
150 ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಗಾಂಜಾ ಸೇವನೆ ಶಂಕೆ ಹಿನ್ನೆಲೆಯಲ್ಲಿ 75 ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ರವಾನಿಸಲಾಗಿದೆ. ಈ ಪೈಕಿ 43 ಮಂದಿ ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವ ಬಗ್ಗೆ ಪಾಸಿಟಿವ್ ವರದಿ ಬಂದಿದ್ದು, ಈ ಸಂಬಂಧ ಅವರೆಲ್ಲರ ಮೇಲೆ ಎನ್ಡಿಪಿಎಸ್ ಕಾಯಿದೆ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಎಲ್ಲಾ ವಿದ್ಯಾರ್ಥಿಗಳು 19-22 ವರ್ಷದ ಒಳಗಿನವರು.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ಅವರ ಮಾರ್ಗದರ್ಶನದಲ್ಲಿ, ಎಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯಕ್, ಮಣಿಪಾಲ ವೃತ್ತ ನಿರೀಕ್ಷಕ ಮಂಜುನಾಥ್, ಮಣಿಪಾಲ ಎಸ್ಐ ರಾಜಶೇಖರ್ ವಂದಳ್ಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.