ಬ್ರಹ್ಮಾವರ, ಅ 05 (DaijiworldNews/HR): ಬ್ರಹ್ಮಾವರ ತಾಲೂಕಿನ ಮಟಪಾಡಿ ಭಾಗದಲ್ಲಿ ಕಳೆದ ಹಲವಾರು ದಿನಗಳಿಂದ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಸಾಕು ಪ್ರಾಣಿಗಳು ಕೂಡಾ ಚಿರತೆಗೆ ಆಹಾರವಾಗಿದ್ದವು. ಈ ಬಗ್ಗೆ ಗ್ರಾಮಸ್ಥರು ಹಲವಾರು ಬಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ಬೋನು ಇರಿಸಿದ್ದು ಬುಧವಾರ ಬೆಳಿಗ್ಗೆ ಬೋನಿನಲ್ಲಿ ಚಿರತೆ ಸೆರೆ ಸಿಕ್ಕಿದೆ. ಸುಮಾರು ಆರು ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಬೋನಿಗೆ ಬಿದ್ದ ಚಿರತೆ ಕೂಗುತ್ತಿದ್ದನ್ನು ಗಮನಿಸಿ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬಂದಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದು ವಲಯ ಅರಣ್ಯಾಧಿಕಾರಿಗಳು ಮತ್ತು ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಇರುವ ಬೋನನ್ನು ವನ್ಯಧಾಮಕ್ಕೆ ಕೊಂಡೊಯ್ದು ಚಿರತೆಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಗ್ರಾಮದಲ್ಲಿ ಅಂಗನವಾಡಿ, ಶಾಲೆಯ ಪರಿಸರದಲ್ಲಿ ಕೂಡಾ ಈ ಹಿಂದೆ ಚಿರತೆ ತಿರುಗಾಡುತ್ತಿರುವುದನ್ನು ಸಾರ್ವಜನಿಕರು ಗಮನಿಸಿ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಬೋನನ್ನು ಇರಿಸಿ ಚಿರತೆಯನ್ನು ಸೆರೆಹಿಡಿದಿದೆ. ಅರಣ್ಯ ಅಧಿಕಾರಿಗಳ ಕಾರ್ಯವನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ.