ಮಂಗಳೂರು, ಅ 13 (DaijiworldNews/DB): ಬಿಜೆಪಿ ಕಾರ್ಯಕರ್ತ ದಿ. ಪುವೀಣ್ ನೆಟ್ಟಾರು ಅವರ ಪತ್ನಿ ನೂತನಕುಮಾರಿ ಅವರು ಇಂದು (ಅಕ್ಟೋಬರ್ 13ರ ಗುರುವಾರ) ಬೆಳಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶ ಪತ್ರವನ್ನು ಸ್ವೀಕರಿಸಿದ್ದು, ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ನೂತನಕುಮಾರಿ ಅವರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ 'ಸಿ' ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೇಮಕ ಆದೇಶ ನೀಡಿದ್ದರು. ಆದರೆ ಮಂಗಳೂರಿನಲ್ಲಿ ಕೆಲಸಕ್ಕೆ ಅವಕಾಶ ನೀಡುವಂತೆ ನೂತನ ಕುಮಾರಿ ಅವರು ಮುಖ್ಯಮಂತ್ರಿಯವರಲ್ಲಿ ವಿನಂತಿಸಿಕೊಂಡ ಮೇರೆಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಯ ಆಧಾರಸ್ಥಂಭವಾಗಿದ್ದರು. ಹೀಗಾಗಿ ಅವರ ಪತ್ನಿಗೆ ಮಾನವೀಯ ನೆಲೆಯಲ್ಲಿ ಉದ್ಯೋಗ ನೀಡಬೇಕೆಂದು ಬಿಜೆಪಿಯ ಸ್ಥಳೀಯ ನಾಯಕರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಸಿಎಂ ಸಚಿವಾಲಯದಲ್ಲಿ ಕೆಲಸ ಕೊಡಿಸುವುದಾಗಿ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಪ್ರಕಟಿಸಿದ್ದರು.