ಕಾರ್ಕಳ, ಅ 17 (DaijiworldNews/DB): ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಬೇಡಿಕೆಗೆ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಜ್ಯ ಸರ್ಕಾರವು ಸ್ಪಂದಿಸಿ ಪರಿಶಿಷ್ಟ ಜಾತಿಗೆ ಇದ್ದ ಶೇ.15 ಮೀಸಲಾತಿಯನ್ನು ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಇದ್ದ ಶೇ.3 ಮೀಸಲಾತಿಯನ್ನು ಶೇ. 7ಕ್ಕೆ ಹೆಚ್ಚಿಸಿದ್ದಕ್ಕಾಗಿ ಉಡುಪಿ ಹಾಗೂ ದ.ಕ. ಜಿಲ್ಲೆಯ ಸುಮಾರು ಒಂದು ಸಾವಿರಕ್ಕೂ ಅಧಿಕ ಪರಿಶಿಷ್ಟ ಪಂಗಡದವರು ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಮೀಸಲಾತಿ ಹೆಚ್ಚಳ ಮಾಡುವಂತೆ ಹಾಗೂ ಜನಾಂಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇರೆ ಬೇರೆ ಸರಕಾರಗಳು ಅಸ್ತಿತ್ವದಲ್ಲಿದ್ದ ಸಂದರ್ಭದಲ್ಲಿಯೂ ಕೂಡ ಇಂದಿನ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರ ನೇತೃತ್ವದಲ್ಲಿ ಸಂಬಂಧಪಟ್ಟ ಇಲಾಖಾ ಸಚಿವರಲ್ಲಿ ಹಾಗೂ ಆಯಾ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿತ್ತು. ಇದೀಗ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಬೇಡಿಕೆಯನ್ನು ಈಡೇರಿಸಿರುವುದು ರಾಜ್ಯದ ಇಡೀ ದಲಿತ ಸಮುದಾಯಕ್ಕೆ ಖುಷಿಯನ್ನು ಉಂಟು ಮಾಡಿದೆ ಎಂದು ಸಮುದಾಯದ ಮುಖಂಡರು ಹೇಳಿದರು.
ಸಚಿವ ವಿ. ಸುನಿಲ್ ಕುಮಾರ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ್ ಗೌಡ ಈದು, ಎಸ್ಸಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಎಸ್ಟಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯಕ್, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಗೋಪಾಲ್ ಪಳಂಜಿ, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ನಿತ್ಯಾನಂದ ನಾಯಕ್ ಉಪಸ್ಥಿತರಿದ್ದರು.