Karavali
ಗಂಗೊಳ್ಳಿ: ಅಭಿವೃದ್ಧಿ ಹಾಗೂ ಬಡವರ ಪರ ಬಿಜೆಪಿ ಸರಕಾರ - ಸಿಎಂ ಬೊಮ್ಮಾಯಿ
- Tue, Nov 08 2022 08:19:04 AM
-
ಗಂಗೊಳ್ಳಿ, ನ 08(DaijiworldNews/MS): ರಾಜ್ಯದಲ್ಲಿನ ಬಿಜೆಪಿ ಸರಕಾರ ಜನರಿಗೆ ಸ್ಪಂದಿಸುವ ಸರಕಾರ. ಜನರ ಕಷ್ಟಸುಖಗಳಲ್ಲಿ ಪಾಲ್ಗೊಂಡು ಅಭಿವೃದ್ಧಿ ಪರ ಹಾಗೂ ಬಡವರ ಪರ ಸರಕಾರವಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಬಿಜೆಪಿ ಸರಕಾರವಿದ್ದು, ಸ್ಥಳೀಯವಾಗಿ ಅಭಿವೃದ್ಧಿ ಪರ ಚಿಂತನೆ ಮಾಡುವ ಡಬಲ್ ಇಂಜಿನ್ ಇದೆ. ಜನಪರ, ಜನಪ್ರಿಯ, ಜನಮನ್ನಣೆ ಸರಕಾರ ಮತ್ತು ಜನಪ್ರಿಯ ಶಾಸಕರು, ಸಂಸದರು ಇದ್ದರೆ ಯಾವ ರೀತಿಯ ಸ್ಪಂದನೆ ದೊರೆಯುತ್ತದೆ ಎಂಬುದಕ್ಕೆ ಬೈಂದೂರಿನ ಈ ಜನಸ್ತೋಮ ಮತ್ತು ಅಭಿವೃದ್ಧಿಯೇ ಸಾಕ್ಷಿಯಾಗಿದೆ ಎಂದು ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೇಳಿದರು.
ಉಡುಪಿ ಜಿಲ್ಲಾಡಳಿತ ವತಿಯಿಂದ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯ ನಗುಸಿಟಿಯಲ್ಲಿ ಮನೆ ಮನೆಗೆ ಕುಡಿಯುವ ನೀರು, ಮರವಂತೆ ಮೀನುಗಾರಿಕೆ ಬಂದರು, ಏತ ನೀರಾವರಿ ಯೋಜನೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
2019ರ ಬಳಿಕ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದ ಬಳಿಕ ಬೈಂದೂರಿನ ಚಿತ್ರಣವೇ ಬದಲಾಗಿದೆ. ನೆನೆಗುದಿಗೆ ಬಿದ್ದಿದ್ದ ಹತ್ತು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿರುವುದಲ್ಲದೆ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಮತ್ತು ಯೋಜನೆಗಳನ್ನು ತರುವಲ್ಲಿ ಯಶಸ್ವಿಯಾಗಿದ್ದರು. ಸಮಗ್ರ ಕರ್ನಾಟಕದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಮಾಡಲಾಗುತ್ತಿದ್ದು, ರಾಜ್ಯದಲ್ಲಿ ಸಾಮಾಜಿಕ ಬದಲಾವಣೆಯಾಗುತ್ತಿದೆ ಎಂದರು.
ಎಸ್.ಸಿ/ಎಸ್.ಟಿ ಸಮುದಾಯವರಿಗೆ ಪ್ರತಿ ತಿಂಗಳು 75 ಯೂನಿಟ್ ವಿದ್ಯುತ್ನ್ನು ಉಚಿತವಾಗಿ ನೀಡುವ ಮತ್ತು ಈ ಸಮುದಾಯಗಳಿಗೆ ನೀಡಲಾದ ಮೀಸಲಾತಿಯನ್ನು ಹೆಚ್ಚಿಸುವ ಕ್ರಾಂತಿ ಕಾರಿ ನಿರ್ಣಯನ್ನು ರಾಜ್ಯ ಬಿಜೆಪಿ ಸರಕಾರ ಕೈಗೊಂಡಿದೆ. ಕರಾವಳಿ ಭಾಗದ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಬಗೆಹರಿಸಲು 9 ಲಕ್ಷ ಹೆಕ್ಡೇರ್ ಡೀಮ್ಡ್ ಫಾರೆಸ್ಟ್ ಭೂಮಿಯಲ್ಲಿ 6 ಲಕ್ಷ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ. ಕರಾವಳಿ ಭಾಗದಲ್ಲಿ ಕುಚ್ಚಲಕ್ಕಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ರೈತರಿಂದ ಕುಚ್ಚಲಕ್ಕಿಯನ್ನು ಖರೀದಿಸಿ ಬಡವರಿಗೆ ನೀಡಲು ಸರಕಾರ ಕ್ರಮಕೈಗೊಂಡಿದೆ. ಈ ಭಾಗದ ಬಂದರುಗಳ ಅಭಿವೃದ್ಧಿಗೆ ಮುಂದಿನ ಬಜೆಟ್ನಲ್ಲಿ ಅತೀ ಹೆಚ್ಚಿನ ಅನುದಾನವನ್ನು ಮೀಸಲಿಟ್ಟು, ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರಕಾರ ಆದ್ಯತೆ ನೀಡಲಿದೆ ಎಂದು ಅವರು ಹೇಳಿದರು.ಅಡಿಕೆ ಬೆಳಗಾರರನ್ನು ಕಾಡುತ್ತಿರುವ ಎಲೆಚುಕ್ಕಿ ರೋಗದ ಅಧ್ಯಯನ ನಡೆಸಲು ಸೂಚನೆ ನೀಡಲಾಗಿದ್ದು, ರೋಗವನ್ನು ನಿಯಂತ್ರಿಸಲು ಮತ್ತು ಔಷಧ ಸಿಂಪಡಣೆಯಾಗಿ ತುರ್ತಾಗಿ 10 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.
ಇತ್ತೀಚಿಗೆ ನಡೆದ ಗ್ಲೋಬಲ್ ಇನ್ವೆಸ್ಟರ್ ಮೀಟ್ನಲ್ಲಿ ರಾಜ್ಯಕ್ಕೆ 9.3 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗಿದ್ದು, ಕರಾವಳಿಯ ಮಂಗಳೂರು, ಉಡುಪಿ ಹಾಗೂ ಕಾರವಾರದಲ್ಲಿ 2 ಲಕ್ಷ ಕೋಟಿ ಅನುದಾನ ಹೂಡಿಕೆಯಾಗಿದೆ. ಮುಂದಿನ ದಿನಗಳಲ್ಲಿ ಯುವಕರ ಕೈಗೆ ಉದ್ಯೋಗ ನೀಡಿ ಅವರನ್ನು ಸಶಕ್ತರನ್ನಾಗಿ ಮಾಡಲು ಸರಕಾರ ಮುಂದಾಗಿದೆ. ರೈತರ ಮಕ್ಕಳಿಗೆ ಪ್ರಾರಂಭಿಸಲಾಗಿದ್ದ ವಿದ್ಯಾನಿಧಿ ಯೋಜನೆಯನ್ನು ಕೂಲಿಕಾರ ಮತ್ತು ಮೀನುಗಾರರ ಮಕ್ಕಳಿಗೂ ವಿಸ್ತರಿಸಲಾಗಿದ್ದು, ಸುಮಾರು 2 ಲಕ್ಷ ಮೀನುಗಾರರ ಮಕ್ಕಳು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಎಸ್.ಸಿ/ಎಸ್.ಟಿ ಸಮುದಾಯಕ್ಕೆ 28 ಸಾವಿರ ಕೋಟಿ ಅನುದಾನ ಮೀಸಲಿಟ್ಟು ಅದನ್ನು ಬಿಡುಗಡೆ ಮಾಡಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯಾದ್ಯಂತ 100 ಅಂಬೇಡ್ಕರ್ ಹಾಸ್ಟೆಲ್ ನಿರ್ಮಿಸಲು ಮತ್ತು 50 ಕನಕದಾಸರ ಹೆಸರಿನಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಲು ಸರಕಾರ ಯೋಜನೆ ರೂಪಿಸಿದೆ. ಮಂಗಳೂರಿನಲ್ಲಿ ಒಂದು ಸಾವಿರ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೂ ಸರಕಾರ ಮುಂದಾಗಿದೆ ಎಂದು ಅವರು ಹೇಳಿದರು.
ಕರಾವಳಿ ಭಾಗದ ಜನರು ಸರಕಾರದ ಮೇಲೆ ವಿಶ್ವಾಸ ಇಟ್ಟು ಕಳೆದ ಅನೇಕ ವರ್ಷಗಳಿಂದ ಬಿಜೆಪಿ ಸರಕಾರವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಜನರು ಪಕ್ಷ ಮತ್ತು ಸರಕಾರದ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು, ಮಾಡಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ಹಿಡಿದುಕೊಂಡು ನಿಮ್ಮ ಮುಂದೆ ಬರುತ್ತೇವೆ. ಕರಾವಳಿ ಭಾಗದ ಜೊತೆಗೆ ಸಮಗ್ರ ಕರ್ನಾಟಕದ ಅಭಿವೃದ್ಧಿ ನಮ್ಮ ಸರಕಾರ ಕಟಿಬದ್ಧವಾಗಿದೆ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರು ಮತ್ತು ಸಂಸದರ ನಿರಂತರ ಪರಿಶ್ರಮ, ಹೋರಾಟ ಮತ್ತು ಚಿಂತನೆಯ ಫಲವಾಗಿ ಶುದ್ಧ ಕುಡಿಯುವ ನೀರು, ರಸ್ತೆ, ಸೇತುವೆ ಮತ್ತಿತರ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ. ಜನರು ಸರಕಾರದ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಂಡು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಾಗುವುದು. 2023ಕ್ಕೆ ಮತ್ತೆ ಬಿಜೆಪಿ ಸರಕಾರವನ್ನು ಆಡಳಿತಕ್ಕೆ ತರಲು ಶ್ರಮಿಸಲಾಗುವುದು ಎಂದು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಮಾತನಾಡಿ, ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣ, ಗಂಗೊಳ್ಳಿ ಬಂದರು ಅಭಿವೃದ್ಧಿಗೆ ಅನುದಾನ ಬಿಡುಗಡೆ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ಇರುವುದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅನುದಾನ ಬಿಡುಗಡೆ, ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ, ಮೆಡಿಕಲ್ ಕಾಲೇಜು ಸ್ಥಾಪನೆ, ವಿಮಾನ ನಿಲ್ದಾಣ ರಚನೆ ಹಾಗೂ 94ಸಿ ಅಡಿ ಅರ್ಜಿ ಹಾಕಿದ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲು ಸರಕಾರ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸವಲತ್ತು ವಿತರಿಸಲಾಯಿತು. ವಿದ್ಯಾನಿಧಿ ಯೋಜನೆಯಡಿ ಮೀನುಗಾರ ಮಕ್ಕಳಿಗೆ ವಿದ್ಯಾನಿಧಿ ವಿತರಿಸಲಾಯಿತು. ವಿವಿಧ ಇಲಾಖೆಗಳು ಸುಮಾರು 1095.16 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು 251.46 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.
ಸಚಿವರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ವಿ.ಸುನೀಲ್ ಕುಮಾರ್, ಗೋವಿಂದ ಎಂ.ಕಾರಜೋಳ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕ್ಯಾಂಪ್ಕೊ ಅಧ್ಯಕ್ಷ ಕಿಶೋರ ಕುಮಾರ್ ಕೊಡ್ಗಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಖಾದಿ ಮತ್ತು ಗ್ರಾಮೋದ್ಯಗ ಮಂಡಳಿ ನಿರ್ದೇಶಕ ಮಿಥುನ್ ಆರ್.ಹೆಗ್ಡೆ, ಮಾಜಿ ಸಚಿವ ಪ್ರಮೋದ ಮಧ್ವರಾಜ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚಿಂದ್ರ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸ್ವಾಗತಿಸಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಕೆ.ಸಿ.ರಾಜೇಶ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ವಂದಿಸಿದರು.ವೇದಿಕೆಗೆ ಆಗಮಿಸುವ ಮುನ್ನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಹಾಗೂ ಶಾಸಕರು ಗೋಪೂಜೆ ನೆರವೇರಿಸಿದರು