ಉಡುಪಿ, ನ 08 (DaijiworldNews/DB): ಮುರುಘಾ ಶ್ರೀಗಳು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಖಂಡಿತಾ ಅವರಿಗೆ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಉಡುಪಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಮುರುಘಾ ಶರಣರ ಕ್ಷಮಿಸಲಾರದ ಅಕ್ಷಮ್ಯ. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ಭಾವಿಸಿರಲಿಲ್ಲ. ಯಾರೂ ಅವರು ಈ ರೀತಿ ಮಾಡುತ್ತಾರೆಂದು ನಿರೀಕ್ಷೆ ಮಾಡಿರಲಿಲ್ಲ. ಅವರ ತಪ್ಪಿಗೆ ತಕ್ಕ ಶಿಕ್ಷೆಯನ್ನು ಅವರು ಅನುಭವಿಸಲೇಬೇಕು ಎಂದರು.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶ್ರೀಗಳ ವಿರುದ್ಧ ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.