ಮಂಗಳೂರು,ಫೆ 22(MSP): ಮೂಡುಬಿದಿರೆ ಪೊಲೀಸ್ ಠಾಣೆ ಹಾಗೂ ಕೇರಳದ ಕಾಸರಗೋಡಿನ ಅದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಸರಗಳ್ಳರಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಲಿಗೆ ಮಾಡಿದ ಚಿನ್ನಾಭರಣ ಹಾಗೂ ದ್ವಿಚಕ್ರ ವಾಹನನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರದ ಕಣ್ಣೂರು ಗ್ರಾಮದ ನಿವಾಸಿ ಕೆ.ನೂಮನ್ ಹಾಗೂ ಸಂಶೀರ್ ಬಂಧಿತ ಆರೋಪಿಗಳು. ಇವರಿಂದ 2 ಚಿನ್ನದ ಸರ, 2 ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ಸೇರಿದಂತೆ ಒಟ್ಟು ರೂ.1,10,900 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸರಕಳ್ಳತನ ಮಾಡುವ ಸಮಯ ವಾಹನದ ನಂಬರ್ ಪ್ಲೇಟ್ಗಳನ್ನು ಅಳವಡಿಸದೇ ಕೃತ್ಯವನ್ನು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗಿನ ದಿನಗಳಲ್ಲಿ ನಗರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ಸರಗಳ್ಳತನ ಮಾಡುವ ಇಬ್ಬರು ಯುವಕರು ನೋಂದಣಿ ಸಂಖ್ಯೆ ಅಳವಡಿಸದೇ ಇರುವ ದ್ವಿಚಕ್ರ ವಾಹನದಲ್ಲಿ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದಾರೆಂಬ ಖಚಿತ ಮಾಹಿತಿ ಮಂಗಳೂರು ಸಿಸಿಬಿ ಪೊಲೀಸರಿಗೆ ದೊರೆತಿತ್ತು. ದ್ವಿಚಕ್ರ ವಾಹನವನ್ನು ಬೆನ್ನಟ್ಟಿ ಹಿಡಿದಾಗ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಇದೇ 15 ರಂದು ಮೂಡುಬಿದಿರೆಯ ಪ್ರಾಂತ್ಯದಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಚೈನ್ ಕಳ್ಳತನ ಮಾಡಲಾಗಿತ್ತು. ಇದೇ 17 ರಂದು ಕಾಸರಗೋಡು ಜಿಲ್ಲೆ ಅದೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಾರು ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಅಪಹರಿಸಲಾಗಿತ್ತು.
ಆರೋಪಿಗಳ ಪೈಕಿ ನೂಮನ್ ಎಂಬಾತನ ವಿರುದ್ಧ ಈ ಹಿಂದೆ ಬಂಟ್ವಾಳ ಗ್ರಾಮಾಂತರ, ಬಂಟ್ವಾಳ ನಗರ ಠಾಣೆ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ತಲಾ 2 ಸರಗಳ್ಳತನ ಪ್ರಕರಣ, ಮಂಗಳೂರು ಪೂರ್ವ ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಸರಗಳ್ಳತನ ಸೇರಿದಂತೆ ಒಟ್ಟು 8 ಪ್ರಕರಣ ದಾಖಲಾಗಿವೆ. ಈತ 15 ದಿನಗಳ ಹಿಂದಷ್ಟೇ ಜಾಮೀನು ಪಡೆದು ಬಿಡುಗಡೆಗೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್, ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಶಾಂತಾರಾಮ, ಸಬ್ ಇನ್ಸ್ಪೆಕ್ಟರ್ಗಳಾದ ಶ್ಯಾಮ್ ಸುಂದರ್, ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.