ಮಂಗಳೂರು, ನ 11 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಲ್ಲಿ ಕುಸಿತವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ರವಿ ಎಂ ಆರ್ ತಿಳಿಸಿದ್ದಾರೆ. ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ರವಿ ಎಂ.ಆರ್. ಡಿಸೆಂಬರ್ 8ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.
ಸದ್ಯ ಸಿದ್ಧವಾಗಿರುವಂತಹ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 17,08,955 ಮತದಾರರನ್ನು ಗುರುತಿಸಲಾಗಿದೆ. ಇವರಲ್ಲಿ ಮಹಿಳೆಯರ ಸಂಖ್ಯೆ 8,71,364 ಆಗಿದ್ದು, ಪುರುಷ ಮತದಾರರು 8,37,527 ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಎಂ ಆರ್ ತಿಳಿಸಿದ್ದಾರೆ.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯ ಹಿನ್ನೆಲೆಯಲ್ಲಿ ವಿಶೇಷ ನೋಂದಣಿ ಅಭಿಯಾನ ನವೆಂಬರ್ 12, ನವೆಂಬರ್ 20, ಡಿಸೆಂಬರ್ 3 ಮತ್ತು ಡಿಸೆಂಬರ್ 4ರಂದು ನಡೆಯಲಿದೆ. 2023ರ ಜನವರಿ 3ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು. ದ.ಕ. ಜಿಲ್ಲಾ ವಿಧಾನಸಭಾ ಕ್ಷೇತ್ರಗಳ ಪೈಕಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರವು 2,39,534 ಮತದಾರರೊಂದಿಗೆ ಅತಿ ಹೆಚ್ಚು ಮತದಾರರನ್ನು ಹೊಂದಿದ್ದು, ಮಂಗಳೂರು ಕ್ಷೇತ್ರ(ಉಳ್ಳಾಲ) ಅತಿ ಕಡಿಮೆ ಮತದಾರರನ್ನು 1,92,315 ಹೊಂದಿರುವ ಕ್ಷೇತ್ರ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.