ಮಂಗಳೂರು, ನ 16 (DaijiworldNews/DB): ಸಮಾಜದ ಅಭಿವೃದ್ಧಿಯಲ್ಲಿ ಪತ್ರಿಕಾ ರಂಗದ ಕೊಡುಗೆ ದೊಡ್ಡದು. ಸಮಾಜದಲ್ಲಿ ಅರಿವು ಮೂಡಿಸುವಲ್ಲಿ ಮಾಧ್ಯಮ ಮಹತ್ವದ ಪಾತ್ರ ವಹಿಸುತ್ತಾ ಬಂದಿದೆ ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದ್ದಾರೆ.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಡೆದ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ನಗರದ ಪತ್ರಿಕಾ ಭವನದಲ್ಲಿಂದು ಉದ್ಘಾಟಿಸಿ ಅವರು ಮಾತನಾಡಿದರು.
ಮಾಧ್ಯಮಗಳು ಸಮಾಜದಲ್ಲಿ ಜನರಿಗೆ ಮಾಹಿತಿ ನೀಡುವ ಮೂಲಕ ಅತ್ಯಂತ ಪ್ರಭಾವಶಾಲಿಯಾಗಿ ಜನರ ನಡುವೆ ಇದೆ. ಜನರ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ, ಸಂವಿಧಾನದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಜೊತೆ ಪತ್ರಿಕಾ ರಂಗ ಮಹತ್ವ ಪಡೆದಿದೆ. ದ.ಕ.ಜಿಲ್ಲಾ ಪತ್ರಕರ್ತರ ಸಂಘ ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿರುವುದು ಶ್ಲಾಘನೀಯ ಎಂದರು.
ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಡಾ .ಅನಂತ ಪ್ರಭು, ಡಿಜಿಟಲ್ ತಂತ್ರಜ್ಞಾನದಲ್ಲಿ ಸುರಕ್ಷಾ ವಿಧಾನಗಳ (ಸುರಕ್ಷತಾ ಸಾಧನಗಳು) ಬಗ್ಗ ಉಪನ್ಯಾಸ ನೀಡಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಮಾಧ್ಯಮ ಅಕಾಡೆಮಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪತ್ರಿಕಾ ಭವನದ ಅಧ್ಯಕ್ಷ ರಾಮಕೃಷ್ಣ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ. ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ರಾಜ್ಯ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಮೊದಲಾದವರು ಉಪಸ್ಥಿತರಿದ್ದರು.
ರಾಷ್ಟ್ರೀಯ ಪತ್ರಕರ್ತರ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ. ಹರೀಶ್ ರೈ ನಿರೂಪಿಸಿ ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.