ಮಂಗಳೂರು, ನ 17 (DaijiworldNews/DB): ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯಾದ್ಯಂತ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಕೆ ಭರಾಟೆ ಜೋರಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಕೆ ಬಿರುಸಿನಿಂದ ಸಾಗಿದೆ. ಬಂಟ್ವಾಳ ಕ್ಷೇತ್ರದಿಂದ ಮಾಜಿ ಸಚಿವ ಬಿ. ರಮಾನಾಥ ರೈ, ರಾಕೇಶ್ ಮಲ್ಲಿ, ಅಶ್ವನಿಕುಮಾರ್ ರೈ ಅವರು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದರೆ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿಯೂ ಟಿಕೆಟ್ ಬಯಸಿ ಅರ್ಜಿ ಸಲ್ಲಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, 10ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ ಎನ್ನಲಾಗಿದೆ.
ಈಗಾಗಲೇ ಪುತ್ತೂರು ಕ್ಷೇತ್ರದಿಂದ ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್. ಮಹಮ್ಮದ್ ಅರ್ಜಿ ಸಲ್ಲಿಸಿದ್ದಾರೆ. ಕಾವು ಹೇಮನಾಥ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ದಿವ್ಯಪ್ರಭಾ ಗೌಡ, ಎಂ.ಬಿ. ವಿಶ್ವನಾಥ ರೈ, ಭರತ್ ಮುಂಡೋಡಿ, ಸತೀಶ್ ಕೆಡಿಂಜೆ ಮೊದಲಾದವರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಇನ್ನು ಮಂಗಳೂರು ಉತ್ತರ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಪೈಪೋಟಿ ಆರಂಭವಾಗಿದ್ದು, ಹಳೆ ಮುಖಗಳೊಂದಿಗೆ ಹೊಸ ಮುಖಗಳೂ ಟಿಕೆಟ್ ಗಿಟ್ಟಿಸಿಕೊಳ್ಳಲು ಪೈಪೋಟಿ ಆರಂಭಿಸಿದ್ದಾರೆ. ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್, ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಅಲಿ ಅವರೂ ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಶಾಸಕ ಮೊಯ್ದೀನ್ ಬಾವ, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ಮಾಜಿ ಮೇಯರ್ ಕವಿತಾ ಸನಿಲ್, ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಅವರೂ ಟಿಕೆಟ್ಗಾಗಿ ಪ್ರಯತ್ನನಿರತರಾಗಿದ್ದಾರೆ.
ಹೈಕಮಾಂಡ್ ನಿರ್ಧಾರ
ಇನ್ನು ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಡಿಸೆಂಬರ್ ತಿಂಗಳಾರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಹಲವು ಮಂದಿ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಕೆ ಮಾಡಿದ್ದು, ಅರ್ಜಿ ಸಲ್ಲಿಸಿದವರ ಪೈಕಿ ಯಾರಿಗೆ ಟಿಕೆಟ್ ನೀಡಬೇಕೆಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ಹೀಗಾಗಿ ಹೈಕಮಾಂಡ್ ಹೊಸ ಮುಖಗಳಿಗೆ ಮಣೆ ಹಾಕಲಿದೆಯೇ ಅಥವಾ ಅನುಭವಿಗಳನ್ನೇ ಆಯ್ಕೆ ಮಾಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.