ಮಂಗಳೂರು, ನ 30 (DaijiworldNews/DB): ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ಡಿಸೆಂಬರ್ 21 ರಿಂದ 27ರವರೆಗೆ ನಡೆಯುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಹಿನ್ನಲೆಯಲ್ಲಿ, ಮೂಡಬಿದಿರೆಯನ್ನು ಕೇಂದ್ರೀಕರಿಸಿಕೊಂಡು ಸಾಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಇಕ್ಕೆಲಗಳನ್ನು ಸ್ವಚ್ಛಪಡಿಸಲು ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಎಂಬ ಶಿರೋನಾಮೆಯೊಂದಿಗೆ ಬೃಹತ್ ಸ್ವಚ್ಛತಾ ಶ್ರಮದಾನವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ತಿಳಿಸಿದ್ದಾರೆ.
ನವೆಂಬರ್ 30ರ ಬುಧವಾರ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್(ಗ್ರಾ) ವತಿಯಿಂದ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಉತ್ಸವದ ಅಂಗವಾಗಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ಮತ್ತು ಮೂಲ್ಕಿ ತಾ.ಪಂನ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಬೃಹತ್ ಸ್ವಚ್ಛತಾ ಶ್ರಮದಾನದ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಅಧ್ಯಕ್ಷರು ಸಮನ್ವಯದಿಂದ ಕೆಲಸ ಮಾಡುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು. ದೇಶ ವಿದೇಶದ ಸಾವಿರಾರು ವಿದ್ಯಾರ್ಥಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯ ಸ್ವಚ್ಛತೆಗೆ ಸ್ಥಳೀಯ ಸಂಘಟನೆಗಳು, ಸಾರ್ವಜನಿಕ ಭಾಗೀದಾರಿಕೆಯಲ್ಲಿ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಅಗತ್ಯ ಕ್ರಮವಹಿಸಬೇಕು ಎಂದರು.
ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯು ವ್ಯವಸ್ಥಿತವಾಗಿ ನಡೆಯಲು ಈ ಕಾರ್ಯಕ್ರಮ ಸುವರ್ಣಾವಕಾಶವಾಗಿದ್ದು ಇದರಿಂದ ಸ್ಚಚ್ಛತೆಯ ಸಂದೇಶವನ್ನು ಜಗತ್ತಿಗೆ ನಾವು ಕೊಟ್ಟಂತಾಗುತ್ತದೆ ಎಂದವರು ತಿಳಿಸಿದರು.
ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಟ್ರಸ್ಟಿ ವಿವೇಕ್ ಅಳ್ವಾ ಮಾತನಾಡಿ, ಈ ಜಾಂಬೂರಿ ಮೂಲಕ ದೇಶದ ಸಂಸ್ಕೃತಿಯನ್ನು ಪರಿಚಯಿಸುವ ಕೆಲಸವಾಗುತ್ತದೆ. ಈ ಕಾರ್ಯಕ್ರಮದಲ್ಲಿ 50 ಸಾವಿರ ವಿದ್ಯಾರ್ಥಿಗಳು, 5 ಸಾವಿರ ಶಿಕ್ಷಕರು ಭಾಗವಹಿಸಲಿದ್ದಾರೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ವಿವಿಧ ಮಾಹಿತಿ ಹಾಗೂ ಮಾರಾಟ ವಸ್ತುಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ ನ ಅಂತಾರಾಷ್ಟ್ರೀಯ ಜಾಂಬೂರಿ ಕಮಿಷನರ್ ಮಧುಸೂದನ್, ಮೂಡುಬಿದಿರೆ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ದಯಾವತಿ, ಮಂಗಳೂರು ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.