ಮಂಗಳೂರು, ಡಿ 02 (daijiworldNews/SM): ಕರಾವಳಿಯಲ್ಲಿ ನಿರ್ಮಾಣ ಕಾಮಗಾರಿಗಳು ಚುರುಕುಗೊಂಡಿದ್ದು, ಮರಳಿನ ಅಭಾವ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ ಮರಳು ವಿತರಣೆಗೆ ಕ್ರಮ ಕೈಗೊಳ್ಳಲಾಗುವುದೆಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಿ, 6ರಿಂದ 8 ಸಾವಿರದೊಳಗೆ ಲೋಡ್ ಮರಳು ವಿತರಣೆಗೆ ಕ್ರಮ ಕೈಗೊಳ್ಳಲಾಗುವುದೆಂದು ಅವರು ತಿಳಿಸಿದ್ದಾರೆ.
ಕಾನೂನು ಬದ್ಧವಾಗಿ ಮರಳುಗಾರಿಕೆ ನಡೆಸುವ ಕಾರ್ಯ ಪ್ರಗತಿಯಲ್ಲಿದೆ. ಈಗಾಗಲೇ ಮರಳುಗಾರಿಕೆ ನಡೆಸಲು ಸ್ಥಳಗಳನ್ನು ಗುರುತಿಸಲಾಗಿದೆ. ನಾನ್ ಸಿಆರ್ ಝಡ್ ವ್ಯಾಪ್ತಿಯಲ್ಲಿ ಸ್ಥಳಗಳನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಎದುರಾಗಿರುವ ಮರಳು ಅಭಾವ ಶೀಘ್ರ ನಿವಾರಣೆಯಾಗಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಭರವಸೆ ನೀಡಿದ್ದಾರೆ.