ಮಂಗಳೂರು, ಮಾ 05(SM): ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಮಂಗಳೂರಿನಲ್ಲಿ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ಕಶ ಹಾರ್ನ್ ಗಳನ್ನು ಬಳಸಿಕೊಂಡು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದ್ದ ವಾಹನಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಾಗೂ ಕರ್ಕಶ ಹಾರ್ನ್ ಗಳನ್ನು ತೆರೆವುಗೊಳಿಸಿದ್ದಾರೆ. ಸುಮಾರು 112 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಸಂಚಾರಿ ಠಾಣಾ ಪೊಲೀಸರು, 11200 ರೂಪಾಯಿಗಳ ದಂಡವನ್ನು ಸಂಗ್ರಹಿಸಿದ್ದಾರೆ.
ಇನ್ನು ವಾಹನಗಳಲ್ಲಿ ಸಮರ್ಪಕ ದೀಪಗಳಿಲ್ಲದೇ ಇರುವುದನ್ನು ಪತ್ತೆ ಹಚ್ಚಿರುವ ಪೊಲೀಸರು ಸುಮಾರು 35 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಬ್ರೇಕ್ ಲೈಟ್ ಇಲ್ಲದೆ ಸಂಚರಿಸುತ್ತಿದ್ದ 35 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, 3500 ರೂಪಾಯಿ ದಂಡ ಸಂಗ್ರಹಿಸಿದ್ದಾರೆ.