ಮಂಗಳೂರು, ಜ 12 (DaijiworldNews/DB): ಇದೇ ಜನವರಿ 26ರ ಗುರುವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವ ಗಣರಾಜ್ಯೋತ್ಸವ ದಿನಾಚರಣೆಗೆ ಎಲ್ಲಾ ಇಲಾಖೆಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನವರಿ 12ರ ಗುರುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ನೆಹರು ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡುವರು. ನಂತರ ಶಾಲಾ ಹಾಗೂ ಕಾಲೇಜು ಮಕ್ಕಳಿಂದ ವಿವಿಧ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಅದಕ್ಕಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸಮಿತಿಯನ್ನು ರಚಿಸಿಕೊಂಡು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ರೂಪಿಸಬೇಕು ಎಂದರು.
ಸೂರ್ಯನ ಪ್ರಖರ ಬಿಸಿಲಿರುವ ಕಾರಣ ಪ್ರತಿ ತಂಡಕ್ಕೆ 5-6 ನಿಮಿಷಗಳ ಅವಧಿಯ ಅವಕಾಶ ನೀಡಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉಪಹಾರ ಹಾಗೂ ಸಿಹಿತಿಂಡಿಯನ್ನು ವಿತರಿಸಬೇಕು. ಪಥ ಸಂಚಲನ ತಂಡಗಳು ಉತ್ತಮ ತಾಲೀಮು ನಡೆಸಬೇಕು. ಪೊಲೀಸ್ ಸಿಬ್ಬಂದಿಗಳು ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಬೇಕು, ಉಳಿದಂತೆ ವೇದಿಕೆ ಸಜ್ಜುಗೊಳಿಸುವುದು, ಬ್ಯಾಕ್ಡ್ರಾಪ್, ಆಮಂತ್ರಣ ಪತ್ರಿಕೆಯ ಮುದ್ರಣ ಹಾಗೂ ವಿತರಣೆ, ಅತಿಥಿಗಳು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕುಳಿತುಕೊಳ್ಳಲು ಉತ್ತಮ ಆಸನಗಳು ಹಾಗೂ ಶಾಮಿಯಾನದ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸಿ ಕೊಡಬೇಕು. ಮುಖ್ಯವಾಗಿ ಕುಡಿಯುವ ನೀರು, ಪ್ರಮುಖ ವೃತ್ತಗಳಿಗೆ ಹಾಗೂ ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ಅಲಂಕಾರ ಮಾಡಿಸುವಂತೆ ಅವರು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಸೂಚಿಸಿದರು.
ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಂಜಪ್ಪ ಮಾತನಾಡಿ, ಗಣರಾಜ್ಯೋತ್ಸವ ದಿನದಂದು ವಿದ್ಯುತ್ ಪೂರೈಕೆಗೆ ಯಾವುದೇ ಅಡೆತಡೆಗಳು ಉಂಟಾಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸ್ವಾಗತಿಸಿದರು.