ಮಂಗಳೂರು, ಜ 25 (DaijiworldNews/DB): ಪ್ರಜಾಪ್ರಭುತ್ವದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿ ಮತದಾರ ಪ್ರಭು. ನಮ್ಮ ಜಿಲ್ಲೆ, ನಮ್ಮ ಕ್ಷೇತ್ರಗಳಲ್ಲಿರುವ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಶ್ರಮಿಸುವ ಅರ್ಹ ಜನಪ್ರತಿನಿಧಿಯನ್ನು ಆಯ್ಕೆ ಮಾಡಲು ಪ್ರಜಾಪ್ರಭುತ್ವ ನಮಗೆ ನೀಡಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ.
ಜನವರಿ 25ರ ಬುಧವಾರ ನಗರದ ಟೌನ್ ಹಾಲ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಾವು ವಾಸ ಮಾಡುವ ಪ್ರದೇಶದಲ್ಲಿರುವ ಮೂಲಭೂತ ಸಮಸ್ಯೆಗಳನ್ನು ನಿವಾರಿಸುವ, ಅಗತ್ಯ ಸೌಲಭ್ಯಗಳನ್ನು ಒದಗಿಸಲು ಶ್ರಮಿಸುವ ಅರ್ಹ ಜನಪ್ರತಿನಿಧಿಯನ್ನು ಚುನಾವಣೆಯಲ್ಲಿ ಆಯ್ಕೆ ಮಾಡಬೇಕು. ಅದಕ್ಕಾಗಿ ಮತದಾನದ ದಿನದಂದು ನಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಸಂವಿಧಾನ ನಮಗೆ ನೀಡಿರುವ ಕರ್ತವ್ಯವನ್ನು ನಿಭಾಯಿಸಬೇಕು. ಪ್ರಜಾಪ್ರಭುತ್ವದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಿರುವ ಮತದಾರ ಪ್ರಭು ಈ ಕಾರ್ಯವನ್ನು ಮರೆಯದೆ ನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.
ಶೇ. 37ರಷ್ಟು ಯುವ ಮತದಾರರು ಇರುವ ಪ್ರಜಾಪ್ರಭುತ್ವ ದೇಶ ಭಾರತ. 18 ವರ್ಷ ತುಂಬಿದ ಪ್ರತಿಯೊಬ್ಬರು ತಮ್ಮ ಭವಿಷ್ಯದ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ನೀಡಿರುವ ಹಕ್ಕನ್ನು ಚಲಾಯಿಸಬೇಕು. ಮುಖ್ಯವಾಗಿ 18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು, ಚುನಾವಣಾ ಗುರುತಿನ ಚೀಟಿಯನ್ನು ಪಡೆದು ಚುನಾವಣೆಯಲ್ಲಿ ಮತದಾನದ ದಿನದಂದು ತಾವು ತಮ್ಮ ಕುಟುಂಬದವರು ಹಾಗೂ ಸ್ನೇಹಿತರೊಡನೆ ಬಂದು ಮತ ಚಲಾಯಿಸಿ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಮತದಾನದ ಹಕ್ಕು ಅತ್ಯಂತ ಶ್ರೇಷ್ಠವಾದದ್ದು ಎಂಬುದನ್ನು ಮರೆಯಬಾರದು ಎಂದರು.
ಪಶ್ಚಿಮ ವಲಯ ಡಿಐಜಿ ಚಂದ್ರಗುಪ್ತ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ರಥಬೀದಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಯಕರ್ ಭಂಡಾರಿ ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸ್ವಾಗತಿಸಿದರು. ಸಹಾಯಕ ಆಯುಕ್ತ ಮದನ್ ಮೋಹನ್ ವಂದಿಸಿದರು. ಕಾರ್ಯಕ್ರಮದಲ್ಲಿ 18 ವರ್ಷ ತುಂಬಿದ ನವ ಮತದಾರರಿಗೆ ಚುನಾವಣಾ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಸಪ್ರಶ್ನೆ, ಪ್ರಬಂಧ ಸೇರಿದಂತೆ ವಿವಿಧ ರೀತಿಯ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.