ಮಂಗಳೂರು, ಜ 26 (DaijiworldNews/DB): ದ.ಕ. ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದ ಅಭಿವೃದ್ಧಿಗೆ ಅಗತ್ಯವಿದ್ದಲ್ಲಿ ಮತ್ತಷ್ಟು ಅನುದಾನವನ್ನು ಒದಗಿಸಿಕೊಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಮಂಗಳೂರು ತಾಲೂಕಿನ ಅರ್ಕುಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರ ಕಟ್ಟಡವನ್ನು ಜನವರಿ 26ರ ಗುರುವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ್ನ ಸಂಪನ್ಮೂಲ ಕೇಂದ್ರಗಳಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಅರ್ಕುಳದಲ್ಲಿ ಈ ಕೇಂದ್ರದ ಸ್ಥಾಪನೆಗೆ ಮುತುವರ್ಜಿ ವಹಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಕೆಆರ್ಐಡಿ ಎಲ್ನ ಕಾರ್ಯನಿರ್ವಾಹಕ ಎಂಜಿನಿಯರ್ ಕಾರ್ಯ ಶ್ಲಾಘನೀಯ ಎಂದರು.
ಈ ಕೇಂದ್ರದ ಸ್ಥಾಪನೆಯಿಂದ ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ತಮ್ಮ ಹಂತದಲ್ಲಿ ಅನುಷ್ಠಾನ ಮಾಡಲಾಗುವ ಕರ್ತವ್ಯಗಳು, ಕೆಲಸ ಕಾರ್ಯಗಳು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಮಾಹಿತಿ ಪಡೆಯುವ ಹಾಗೂ ಇಲಾಖೆಯಿಂದ ವಿವಿಧ ರೀತಿಯ ತರಬೇತಿ ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.
ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ ಕುಮಾರ್, ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಲೋಕೇಶ್, ಅಡ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನತ್, ಉಪಾಧ್ಯಕ್ಷೆ ಎಮಿಲ್ಲಾ ಪಿಂಟೊ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಸ್ವಾಗತಿಸಿದರು.