ಮಂಗಳೂರು, ಫೆ (DaijiworldNews/HR): ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಆಚರಣೆ ಹಿನ್ನಲೆಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಿ, ಮಧ್ಯಾಹ್ನ 2.30ಕ್ಕೆ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಕ್ಯಾಂಪ್ಕೋದ ಸುವರ್ಣ ಮಹೋತವ ಕಾರ್ಯಚರಣೆಗೆ ಚಾಲನೆ ನೀಡಲಿದ್ದು, ಅದೇ ಸಂದರ್ಭದಲ್ಲಿ ಅವರು ವಿವಿಧ ಶಿಲನ್ಯಾಸ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನೆರವೇರಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಸಚಿವರಾದ ಅಮಿತ್ ಶಾ ಅವರು ಫೆ.11ರಂದು ಪುತ್ತೂರು ಭೇಟಿ ವೇಳೆ ನಾಲ್ಕು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ವೇ ಸಂಬಂಧಿತ ಕಾಮಗಾರಿ ನಡೆಯುತ್ತಿರುವುದರಿಂದ ಅವರು ಹೈದರಾಬಾದ್ನಿಂದ ಮಧ್ಯಾಹ್ನ 12 ಗಂಟೆಗೆ ಹೊರಟು 1.10 ಗಂಟೆಗೆ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ 1.25ಕ್ಕೆ ವಿಶೇಷ ಹೆಲಿಕಾಪ್ಟರ್ನಲ್ಲಿ ಹೊರಟು 1.50ಕ್ಕೆ ಈಶ್ವರಮಂಗಲ ಹೆಲಿಪ್ಯಾಡ್ನಲ್ಲಿ ಇಳಿಯುವರು. 1.30ರಿಂದ 2.30ರ ವರೆಗೆ ಈಶ್ವರಮಂಗಲದಲ್ಲಿ ಇದ್ದು, ಭಾರತ್ಮಾತಾ ಮಂದಿರ ಉದ್ಘಾಟನೆ, ಪಂಚಮುಖಿ ಆಂಜನೇಯ ದೇವಸ್ಥಾನ ಸಂದರ್ಶಿಸುವರು. ಅಲ್ಲಿಂದ 2.35ಕ್ಕೆ ಹೆಲಿಕಾಪ್ಟರ್ನಲ್ಲಿ ಹೊರಟು 2.45ಕ್ಕೆ ಪುತ್ತೂರಿನ ಫಿಲೋಮಿನಾ ಕಾಲೇಜಿನ ಹೆಲಿಪ್ಯಾಡ್ಗೆ ಆಗಮಿಸುವರು. ಅಲ್ಲಿಂದ ರಸ್ತೆ ಮೂಲಕ ತೆಂಕಿನ ಬೈಪಾಸ್ನ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಮೈದಾನದಲ್ಲಿ ಸಮಾವೇಶಕ್ಕೆ ತೆರಳುವರು. ಪುತ್ತೂರಿನಲ್ಲಿ ಸಂಜೆ 3 ಗಂಟೆಯಿಂದ 5.30ರ ವರೆಗೆ ಇರಲಿದ್ದು, ಈ ವೇಳೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಚಾಲನೆ, ವಿವಿಧ ಉತ್ಪನ್ನಗಳ ಉದ್ಘಾಟನೆ, ಕಾಮಗಾರಿ ಶಿಲಾನ್ಯಾಸ, ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಭೇಟಿ ನೀಡಿ 5.30ಕ್ಕೆ ಹೆಲಿಕಾಪ್ಟರ್ ಮೂಲಕ ಕಣ್ಣೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ನಿರ್ಗಮಿಸುವರು ಎಂದು ಅವರು ಮಾಹಿತಿ ನೀಡಿದರು.
ಕ್ಯಾಂಪ್ಕೋದವರೊಂದಿಗೆ ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿಗಳು ಜೊತೆಗೂಡಿ ಈ ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ರೂಪಿಸಬೇಕು, ಲೋಕೋಪಯೋಗಿ, ಸಹಕಾರ, ಕೃಷಿ ಪೊಲೀಸ್, ಕಂದಾಯ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಿದ್ಧತೆಗಳನ್ನು ಆರಂಭಿಸಬೇಕು. ಕೃಷಿ ಇಲಾಖೆ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸನ್ಮಾನ ನಿಧಿ ಸೇರಿದಂತೆ ಕೇಂದ್ರ ಯೋಜನೆಗಳಡಿ ಸವಲತ್ತು ಪಡೆದಿರುವ ಫಲಾನುಭವಿಗಳನ್ನು ಅಂದು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು, ಅದೇ ರೀತಿ ಸಹಕಾರ ಇಲಾಖೆಯಿಂದಲೂ ಫಲಾನುಭವಿಗಳಾಗಿರುವವರನ್ನು ಕಾರ್ಯಕ್ರಮಕ್ಕೆ ಕರೆತರುವ ವ್ಯವಸ್ಥೆ ಮಾಡಬೇಕು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸಚಿವ ಸಂಪುಟದ ಸಚಿವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಎಚ್ಚರ ವಹಿಸಬೇಕು, ಅಗತ್ಯ ಸಾರಿಗೆ ವ್ಯವಸ್ಥೆಗಳು, ಆಹಾರ, ಕುಡಿಯುವ ನೀರು ಪೂರೈಕೆ, ಪಾಕಿರ್ಂಗ್, ಭದ್ರತೆ ಸೇರಿದಂತೆ ವಿವಿಧ ರೀತಿಯ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಮಾತನಾಡಿ, ಕೇಂದ್ರ ಗೃಹ ಸಚಿವರು, ರಾಜ್ಯದ ಮುಖ್ಯಮಂತ್ರಿಗಳು ಮತ್ತು ಸಚಿವರುಗಳು ಆಗಮಿಸಲು ಅನುಕೂಲವಾಗುವಂತೆ ಈಗಾಗಲೇ ಹೆಲಿಪ್ಯಾಡ್ ನಿರ್ಮಾಣಕ್ಕೆ ಸ್ಥಳಗಳನ್ನು ಪರಿಶೀಲಿಸಲಾಗಿದೆ, ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವಂತೆ ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿಯ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಲಾಗಿದೆ, ಕ್ಯಾಂಪ್ಕೋ ವತಿಯಿಂದ ಕಾರ್ಯಕ್ರಮಕ್ಕೆ ಆಗುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಲು ಜಿಲ್ಲಾಡಳಿತ ವತಿಯಿಂದ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗುವುದು, ಭದ್ರತೆ ಹಾಗೂ ರಸ್ತೆ ಸುರಕ್ಷತೆಗಳನ್ನು ಪಾಲಿಸಲು ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಸರ್ಕಾರದ ಕಾರ್ಯಕ್ರಮವಾಗಿರುವುದರಿಂದ ಶಿಷ್ಟಾಚಾರದ ಅನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು, ಕೃಷಿ, ಸಹಕಾರ ಇಲಾಖೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿ ಇಲಾಖೆಗಳಿಗೆ ತಿಳಿಸಲಾಗಿದೆ ಎಂದವರು ಹೇಳಿದರು.
ಪುತ್ತೂರು ಶಾಸಕರಾದ ಸಂಜೀವ್ ಮಠಂದೂರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಸಿಪಿ ಅನ್ಶು ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು.
ಕ್ಯಾಂಪ್ಕೋದ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಕ್ಯಾಂಪು ಸಂಸ್ಥೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.