ಪುತ್ತೂರು, ಫೆ 14 (DaijiworldNews/DB): ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್ಡಿಪಿಐ ಅಭ್ಯರ್ಥಿಯಾಗಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಕಣಕ್ಕಿಳಿಸುವ ಬಗ್ಗೆ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆರೋಪಿ ಶಾಫಿ ಬೆಳ್ಳಾರೆ ಪ್ರಸ್ತುತ ಜೈಲಿನಲ್ಲಿದ್ದಾರೆ. ಅಲ್ಲಿಂದಲೇ ಸ್ಪರ್ಧೆ ನಡೆಸಲಿದ್ದಾರೆ. ಜೈಲಿನಿಂದ ನಾಮಪತ್ರ ಸಲ್ಲಿಸಲು ಅವಕಾಶವಿರುವುದರಿಂದ ಜೈಲಿನಿಂದಲೇ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಇತ್ತೀಚೆಗೆ ಎಸ್ಡಿಪಿಐ ಸಭೆ ಸೇರಿತ್ತು. ಈ ಸಭೆಯಲ್ಲಿ ಶಾಫಿ ಬೆಳ್ಳಾರೆಯನ್ನು ಕಣಕ್ಕಿಳಿಸುವ ಬಗ್ಗೆ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಈ ಆಯ್ಕೆ ವಿಚಾರವಾಗಿ ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಜಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಘೋಷಿಸಲಿದ್ದಾರೆ ಎನ್ನಲಾಗಿದೆ.