ಉಡುಪಿ,ಮಾ 15 (MSP):ಕಾರೊಂದು ಶಾಲಾ ಮಕ್ಕಳನ್ನು ಪ್ರಯಾಣಿಸುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಏಳು ವಿದ್ಯಾರ್ಥಿಗಳು ಹಾಗೂ ಆಟೋ ಚಾಲಕ ಗಾಯಗೊಂಡ ಘಟನೆ ಸಂತಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಮಾ.15 ರ ಶುಕ್ರವಾರ ನಡೆದಿದೆ.
ಸಂತೆ ಕಟ್ಟೆ ಜಂಕ್ಷನ್ ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ಮಾರುತಿ ರಿಡ್ಝ್ ಕಾರು ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಲ್ಲಿ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾದಲ್ಲಿದ್ದ ಕಲ್ಯಾಣ್ ಪುರದ ಎರಡು ಆಂಗ್ಲ ಮಾಧ್ಯಮ ಶಾಲೆಗಳ ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ .ರಿಕ್ಷಾ ಚಾಲನೆ ಮಾಡುತ್ತಿದ್ದ ಚಾಲಕ ಜಾನ್ ಎಂಬವರು ಗಾಯಗೊಂಡಿದ್ದಾರೆ. ರಿಕ್ಷಾದ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ನಗರ ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.