ಮಂಗಳೂರು, ಫೆ 16 (DaijiworldNews/DB): ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರಮುಖ ಯೋಜನೆಗಳು ಸೇರಿದಂತೆ, ವಿವಿಧ ಕಲ್ಯಾಣ ಯೋಜನೆಗಳ ಅರ್ಹ ಫಲಾನುಭವಿಗಳನ್ನು ಗುರುತಿಸುವ ಹಾಗೂ ಅವರಲ್ಲಿ ಜಾಗೃತಿ ಮೂಡಿಸುವ ಸಪ್ತಾಹವನ್ನು ಆಯೋಜಿಸುವಂತೆ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಿರ್ದೇಶನ ನೀಡಿದ್ದಾರೆ.
ಫೆಬ್ರವರಿ16ರ ಬುಧವಾರ ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ವರು ಮಾತನಾಡಿದರು.
ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಅಗತ್ಯವಿರುವ ಯೋಜನೆಗಳ ಪ್ರಯೋಜನ ಪಡೆಯುವಂತೆ ಜಾಗೃತಿ ಮೂಡಿಸಬೇಕು, ಈ ಕಾರ್ಯವನ್ನು ಆಂದೋಲನದ ಮಾದರಿಯಲ್ಲಿ ಹಮ್ಮಿಕೊಳ್ಳಬೇಕು. ಅವರನ್ನೊಳಗೊಂಡಂತೆ ಇತರೆ ಯೋಜನೆಗಳ ಫಲಾನುಭವಿಗಳನ್ನು ಸಹ ಜಿಲ್ಲಾಮಟ್ಟದಲ್ಲಿ ಆಯೋಜಿಸುವ ಸಮ್ಮೇಳನದಲ್ಲಿ ಕರೆತಂದು ಸವಲತ್ತುಗಳನ್ನು ವಿತರಿಸಬೇಕು, ಅದಕ್ಕಾಗಿ ಗ್ರಾಮ, ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಫೆಬ್ರವರಿ 20ರಿಂದ 27ರವರೆಗೆ ಸಪ್ತಾಹವನ್ನು ಹಮ್ಮಿಕೊಳ್ಳಬೇಕು ಎಂದರು.
ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ಪಂಚಾಯತ್ ಸೆಕ್ಟರ್ಗಳಲ್ಲಿ ಬರುವ ವಿವಿಧ ಯೋಜನೆಗಳು, ಪ್ರಮುಖವಾಗಿ ಹಿಂದುಳಿದ ವರ್ಗ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರು, ವಿದ್ಯಾರ್ಥಿ ವೇತನ ಪಡೆಯಲು ಬಿಟ್ಟು ಹೋಗಿರುವ ವಿದ್ಯಾರ್ಥಿಗಳು, ಕಂದಾಯ ಇಲಾಖೆಯಲ್ಲಿ 94ಸಿ, 94 ಸಿಸಿ, ಸಂಧ್ಯಾ ಸುರಕ್ಷಾ ಮನಸ್ವಿನಿ, ಮೈತ್ರಿ, ಆರೋಗ್ಯ ಇಲಾಖೆಯ ಎ ಬಿ ಆರ್ ಕೆ ಫಲಾನುಭವಿಗಳನ್ನು ಆಯ್ಕೆ ಮಾಡಲು ಗಮನಹರಿಸಬೇಕು. ಈ ಫಲಾನುಭವಿ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳು ಆಗಮಿಸುವ ಸಾಧ್ಯತೆಗಳಿರುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರಮುಖ ಯೋಜನೆಗಳ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಅರಿವು ಮೂಡಿಸಬೇಕು. ಗ್ರಾಮ, ಗ್ರಾಮ ಪಂಚಾಯತ್, ತಾಲೂಕು ಮಟ್ಟದ ವ್ಯಾಪ್ತಿಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಅದಕ್ಕೆ ಬೇಕಾದ ಅಗತ್ಯ ದಾಖಲಾತಿಗಳನ್ನು ಅಧಿಕಾರಿಗಳು ಕೇಳಿ ಪಡೆಯಬೇಕು ಎಂದು ಸೂಚಿಸಿದರು.
ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ರಾಜು, ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಉಪಸ್ಥಿತರಿದ್ದರು.