ಉಡುಪಿ, ಮಾ 15(SM): ರಾಜ್ಯದಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿವೆ. ಪಿಯುಸಿ ಪರೀಕ್ಷೆಗಳು ಮುಗಿದಾಕ್ಷಣ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭಗೊಳ್ಳಲಿದೆ. ಮಾರ್ಚ್ 21ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಗಳು ತಡೆಯಲು, ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ಪರೀಕ್ಷೆಗಳನ್ನು ನಡೆಸಲು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನು ಪರೀಕ್ಷೆಗಳು ನಡೆಯುವ ದಿನಗಳಂದು ಬೆಳಗ್ಗೆ 8 ರಿಂದ ರಾತ್ರಿ 6 ರ ವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಅಲ್ಲದೆ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಇನ್ನು ಪರೀಕ್ಷಾ ಕೇಂದ್ರಗಳ ಸುತ್ತ ಸಾರ್ವಜನಿಕರು 5 ಜನ ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವಂತಿಲ್ಲ. ಅನುಮಾನಾಸ್ಪದ ವ್ಯಕ್ತಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವುದು, ಪರೀಕ್ಷಾ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹೊರಗಿನ ವ್ಯಕ್ತಿಗಳು ಯಾವುದೇ ರೀತಿಯ ಬೆದರಿಕೆ ಒಡ್ಡುವುದನ್ನು ನಿಷೇಧಿಸಲಾಗಿದೆ.
ಇನ್ನು ನಿಷೇಧಿತ ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ ಗೌಪ್ಯ ಸಾಮಾಗ್ರಿಗಳನ್ನು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದಿಂದ ಹೊರಗಡೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.