ಉಡುಪಿ, ಫೆ 20 (DaijiworldNews/HR): ರಾಜ್ಯದ ಆಡಳಿತ ನಡೆಸುವ ಸರ್ಕಾರಗಳಿಂದ ಕರಾವಳಿಯ ಸಾಧು ಸಂತರು ತಮ್ಮನ್ನು ಭೇಟಿಯಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆ ಪಿ ನಡ್ಡಾ ಅವರ ಬಳಿ ಒಕ್ಕೊರೊಲಿನಿಂದ ಕೆಲವು ಮನವಿ ಸಲ್ಲಿಸಿದ್ದಾರೆ.
ಸನಾತನ ಧರ್ಮ ಸಂಸ್ಕೃತಿ ಸದ್ವಿಚಾರಗಳಿಗೆ ಸದಾ ಮನ್ನಣೆ ನೀಡಬೇಕು, ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಕ್ರಮ ಕೈಗೊಳ್ಳಬೇಕು, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು, ಕರಾವಳಿಯ ಸಮೃದ್ಧ ಪ್ರಾಕೃತಿಕ ಮತ್ತು ಸಾಂಸ್ಕೃತಿಕ ಧಾರ್ಮಿಕ ಸಂಪನ್ಮೂಲಗಳಿಗೆ ಹಾನಿಯಾಗದಂತೆ ಔದ್ಯಮಿಕ ಔದ್ಯೋಗಿಕ ಪ್ರಗತಿಗೆ ಯೋಜನೆಗಳನ್ನು ಅನುಷ್ಠಾನಿಸಬೇಕು.
ಇನ್ನು ಮುಖ್ಯವಾಗಿ ತುಳು ಭಾಷೆಗೆ ಸೂಕ್ತ ಮಾನ್ಯತೆ ನೀಡಬೇಕು, ಲವ್ ಜಿಹಾದ್, ಕೌ ಜಿಹಾದ್ ಮತ್ತು ಉಗ್ರವಾದಿ ಚಟುವಟಿಕೆಗಳನ್ನು ಮಟ್ಟಹಾಕಲು ಕರಾವಳಿ ಮಲೆನಾಡು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ರಾಷ್ಟ್ರೀಯ ತನಿಖಾ ದಳದ ವಿಭಾಗವನ್ನು ಶೀಘ್ರ ಆರಂಭಿಸಬೇಕು. ಗೋ ಹತ್ಯಾ ನಿಷೇಧ ಕಾನೂನು ಸಮರ್ಪಕ ಜಾರಿಯ ಜೊತೆಗೆ ಗೋಸಂರಕ್ಷಣೆಗೆ ಪೂರಕ ಯೋಜನೆಗಳಿಗೆ ನೆರವು ನೀಡಬೇಕು, ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ ನೀಡಬೇಕು, ದೇವಸ್ಥಾನಗಳ ಭೂಮಿ ಅತಿಕ್ರಮಣ ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸಭೆಯಲ್ಲಿ ಶ್ರೀ ಪೇಜಾವರ ಮಠ ಉಡುಪಿಯ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ಪುತ್ತಿಗೆ ಮಠ ಉಡುಪಿಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ರಾಮಕೃಷ್ಣ ಆಶ್ರಮ ಬೈಲೂರಿನ ಶ್ರೀ ವಿನಾಯಕಾನಂದ ಸ್ವಾಮೀಜಿ, ಶ್ರೀ ಚಿತ್ರಾಪುರ ಮಠ ಮಂಗಳೂರಿನ ಶ್ರೀ ವಿದ್ಯಾಕೇಂದ್ರ ಸ್ವಾಮೀಜಿ, ಶ್ರೀ ಜೈನ ಮಠ, ಮೂಡಬಿದ್ರೆಯ ಸ್ವಸ್ತಿ ಶ್ರೀ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿ, ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಶ್ರೀ ಆನೆಗೊಂದಿ ಸರಸ್ವತಿ ಪೀಠಂ ಉಡುಪಿಯ ಶ್ರೀ ಕಾಳ ಹಸ್ತೇಂದ್ರ ಸರಸ್ವತಿ ಮಹಾ ಸ್ವಾಮೀಜಿ, ಶ್ರೀ ಕ್ಷೇತ್ರ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಪಾಲ್ಗೋಂಡಿದ್ದರು.