ಮಂಗಳೂರು, ಮಾ 18 (MSP): ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಈ ಬಾರಿ ಎಸ್ಡಿಪಿಐ ಅಭ್ಯರ್ಥಿಯಾಗಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರು ಸ್ಪರ್ಧಿಸಲಿದ್ದಾರೆ ಎಂದು ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಮೈಸೂರು ಪ್ರಕಟಿಸಿದರು.
ನಗರದ ನೆಹರೂ ಮೈದಾನದಲ್ಲಿ ಮಾ.18 ರ ಭಾನುವಾರ ನಡೆದ ಎಸ್ಡಿಪಿಐ ಜಿಲ್ಲಾ ಸಮಾವೇಶ ಹಾಗೂ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಘೋಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಪರ್ಯಾಯ ರಾಜಕೀಯ ಶಕ್ತಿಯನ್ನು ಬೆಳೆಸುವ ದೃಷ್ಟಿಯಿಂದ ಎಸ್ಡಿಪಿಐ ಸತತವಾಗಿ ಶ್ರಮಿಸುತ್ತಿದೆ. ಜಿಲ್ಲೆಯಲ್ಲಿ ಎರಡು ಅವಧಿಗೆ ಸಂಸದರು ಆಯ್ಕೆಯಾಗಿದ್ದರೂ ಪ್ರಗತಿ ಆಗಿಲ್ಲ ಎಂದು ಅವರು ದೂಷಿಸಿದರು.
ಎಸ್ಡಿಪಿಐ ರಾಜ್ಯ ಘಟಕದ ಅಧ್ಯಕ್ಷ ಇಲ್ಯಾಸ್ ಮುಹಮ್ಮದ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಲೊ-ಲ ಫ್ರಾಂಕೋ, ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಜಿಲ್ಲಾ ಘಟಕದ ಅಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ದಲಿತ ದಮನಿತರ ಹೋರಾಟಗಾರ ಬಿ.ಆರ್. ಭಾಸ್ಕರ ಪ್ರಸಾದ್, ಪಿಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುಹಮ್ಮದ್ ಸಾಕಿಫ್, ವುಮೆನ್ ಇಂಡಿಯಾ ಮೂಮೆಂಟ್ನ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್, ಜಿಲ್ಲಾ ಘಟಕದ ಅಧ್ಯಕ್ಷೆ ನಸ್ರೀಯಾ ಬೆಳ್ಳಾರೆ ಇದ್ದರು.