ಮಂಗಳೂರು/ಉಡುಪಿ, ಮಾ 09 (DaijiworldNews/DB): ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49,975 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉಭಯ ಜಿಲ್ಲೆಗಳಲ್ಲಿ ಒಟ್ಟು 80 ಕ್ಷೇತ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಬೆಳಗ್ಗೆ 10.30ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಮಧ್ಯಾಹ್ನ 1.30ರ ತನಕ ನಡೆಯಲಿದೆ. ಪರೀಕ್ಷೆಗಳಲ್ಲಿ ಯಾವುದೇ ಗೊಂದಲಗಳಾಗದಂತೆ ಪಾರದರ್ಶಕವಾಗಿ ನಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿ ಕ್ಯಾಮರಾ ಮೂಲಕ ನಿಗಾ ಇಡುವ ಪ್ರಕ್ರಿಯೆ ನಡೆಯಲಿದೆ. ಪ್ರತೀ ಕೊಠಡಿಗಳಲ್ಲಿ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಮೇಲ್ವಿಚಾರಕರ ಅನುಮತಿಯೊಂದಿಗೆ ನೀರು ಪಡೆದು ಕುಡಿಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು, ನಿಯೋಜಿತ ಸಿಬಂದಿ ಹೊರತುಪಡಿಸಿ ಹೊರಗಿನವರಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಇದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ದ.ಕ. ಜಿಲ್ಲೆಯಲ್ಲಿ ಒಟ್ಟು 52 ಪರೀಕ್ಷಾ ಕೇಂದ್ರಗಳಿದ್ದು, ಈ ಪೈಕಿ ಮಂಗಳೂರು, ಮೂಡುಬಿದಿರೆ, ಮೂಲ್ಕಿ, ಉಳ್ಳಾಲದಲ್ಲಿ 28 ಪರೀಕ್ಷಾ ಕೇಂದ್ರಗಳಿವೆ. ಪ್ರತಿ ಕೊಠಡಿಯಲ್ಲಿ ಗರಿಷ್ಠ30 ಕನಿಷ್ಠ20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶವಿದೆ. ಜಿಲ್ಲೆಯಲ್ಲಿ ಒಟ್ಟು 34340 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಈ ಪೈಕಿ 31222 ಮಂದಿ ರೆಗ್ಯುಲರ್, 2016 ಖಾಸಗಿ ಹಾಗೂ 1102 ಮಂದಿ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಉಡುಪಿ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 15634 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ರೆಗ್ಯುಲರ್ 14,341, ಖಾಸಗಿ 719 ಹಾಗೂ 575 ಪುನರಾವರ್ತಿತರು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 7.739 ವಿದ್ಯಾರ್ಥಿಗಳು ಹಾಗೂ 7896 ವಿದ್ಯಾರ್ಥಿನಿಯರು. ವಿಜ್ಞಾನ ವಿಭಾಗದಲ್ಲಿ 6303, ವಾಣಿಜ್ಯ ವಿಭಾಗದಲ್ಲಿ 7673, ಕಲಾ ವಿಭಾಗದಲ್ಲಿ 1658 ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೋಲಿಸ್ ವ್ಯವಸ್ಥೆ ಯೊಂದಿಗೆ ನಿರ್ಭೀತಿಯಿಂದ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಅವ್ಯವಹಾರ ತಡೆಗೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಒಯ್ಯುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.