ಬಂಟ್ವಾಳ, ಮಾ 15 (DaijiworldNews/MS): ಭಾರೀ ಗಣಿಗಾರಿಕೆಗೆ ನಲುಗಿ ಹೋಗಿದ್ದಜಿಲ್ಲೆಯ ಪ್ರಸಿದ್ದ ಧಾರ್ಮಿಕ ಪುಣ್ಯ ಕ್ಷೇತ್ರ ಶ್ರೀ ಕಾರಿಂಜೇಶ್ವರದ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಿ ಕೊನೆಗೂ ರಾಜ್ಯ ಸರಕಾರ ಅದೇಶ ಹೊರಡಿಸಿದೆ. ಶ್ರೀ ಕಾರಿಂಜೇಶ್ವರ ದೇವಸ್ಥಾನದ 2 ಕಿ.ಮೀ. ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯ್ದಿರಿಸಿ ಎಲ್ಲ ರೀತಿಯ ಗಣಿಗಾರಿಕೆ ಮತ್ತು ಕ್ರಷರ್ ಚಟುವಟಿಕೆಯನ್ನು ನಿಷೇಧಿಸಲಾಗಿದೆ.
ಕಾರಿಂಜ ದೇವಾಲಯದ ಸುತ್ತಮುತ್ತ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂದು ದೇವಸ್ಥಾನದ ಸಂರಕ್ಷಣೆಗಾಗಿ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಲು ಮತ್ತು ಪಾವಿತ್ರ್ಯ ಉಳಿಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆಯು ಮನವಿ, ಹೋರಾಟ ನಡೆಸಿತ್ತು. ಗಣಿಕಾರಿಕೆ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆದಿತ್ತು. ಅದರೆ ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧದ ಅದೇಶ ಮಾಡಿದೆ
ದೇವಸ್ಥಾನದ ಸಂರಕ್ಷಣೆಗಾಗಿ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಲು ಮತ್ತು ಪಾವಿತ್ರ್ಯ ಉಳಿಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆಯು ಮನವಿ, ಹೋರಾಟ ನಡೆಸಿತ್ತು. ಅದಕ್ಕೆ ಪೂರಕವಾಗಿ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ಕುಮಾರ್ ಅವರನ್ನು ಕ್ಷೇತ್ರಕ್ಕೆ ಕರೆಸಿ ಗಣಿಗಾರಿಕೆ ನಿಷೇಧ ಪ್ರದೇಶವೆಂದು ಘೋಷಿಸುವಂತೆ ಸರಕಾರಕ್ಕೆ ಒತ್ತಡ ಹೇರಿದ್ದರು.
ಸಿಎಂ ನಿರ್ದೇಶನದಂತೆ ಕ್ಷೇತ್ರದ ಸುತ್ತ ಗಣಿಗಾರಿಕೆ ನಿಷೇಧಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲು ದ.ಕ. ಜಿಲ್ಲಾಧಿಕಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ಸಹಾಯಕ ಕಮಿಷನರ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರ ಮೂಲಕ ದೇವಸ್ಥಾನದ ಸುತ್ತಮುತ್ತ ಜಂಟಿ ಸ್ಥಳ ಪರಿಶೀಲನೆ ನಡೆಸಲಾಗಿತ್ತು.ಈ ಪರಿಶೀಲನೆಯ ವರದಿಯ ಆಧಾರದಲ್ಲಿ ಜಿಲ್ಲಾಧಿಕಾರಿಯವರು ಕಾರಿಂಜ ದೇವಸ್ಥಾನದ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯನ್ನು ಗಣಿಗಾರಿಕೆ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಶ್ರೀ ಕ್ಷೇತ್ರದ ಪಾವಿತ್ರತೆ ಮತ್ತು ಸಂರಕ್ಷಣೆಗಾಗಿ ಸ್ಥಳೀಯ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ದೇವಾಲಯದ ಸುತ್ತಮುತ್ತಲಿನ 02.00 ಕಿ.ಮೀ. ವ್ಯಾಪ್ತಿಯನ್ನು ಗಣಿಗಾರಿಕೆ ಚಟುವಟಿಕೆಗಳ ನಿಷೇಧಿತ ಪ್ರದೇಶ ಎಂದು ಘೋಷಿಸಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ನೀಡಿದ್ದಾರೆ.