ಮಂಗಳೂರು, ಮಾ 29 (DaijiworldNews/DB): ಮೇ ತಿಂಗಳಲ್ಲಿ ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಿಸುವ ವಿಶ್ವಾಸವಿದೆ ಎಂದು ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಹೇಳಿದ್ದಾರೆ.
ಮಾರ್ಚ್ 29ರ ಬುಧವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜನರ ದಾರಿ ತಪ್ಪಿಸಲು ನನ್ನ ವಿರುದ್ದ ಕೆಲವು ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಆದರೆ ಅಧಿಕೃತ ಅಭ್ಯರ್ಥಿಯಾಗಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ನನ್ನ ಹೆಸರನ್ನು ಪಕ್ಷ ಘೋಷಣೆ ಮಾಡುವುದು ಖಚಿತ ಎಂದರು.
ನಾನು ಶಾಸಕನಾಗಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ಕೋಟಿಗಟ್ಟಲೆ ಅನುದಾನ ತಂದಿದ್ದೆ. ಆದರೆ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ನನ್ನ ಇಮೇಜ್ ಹಾಳು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ನಾನು ಈಗ ಶಾಸಕನಲ್ಲದಿದ್ದರೂ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು ಮಾಡುವಂತೆ ಎಂಎಲ್ಸಿ ಬಿ.ಎಂ. ಫಾರೂಕ್ ಅವರಿಗೆ ಮನವಿ ಮಾಡಿದ್ದೆ. ಎಂಎಲ್ಸಿ ಫಾರೂಕ್ ಅವರು 1.60 ಕೋಟಿ ರೂ. ಅನುದಾನ ಮಂಜೂರು ಮಾಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ ಎಂದವರು ತಿಳಿಸಿದರು.
ನೀಡಿದ ಚೆಕ್ಗಳು ಬೌನ್ಸ್ ಆಗುತ್ತವೆ ಎಂಬ ವದಂತಿಗಳ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಯಾವುದೇ ಚೆಕ್ಗಳು ಬೌನ್ಸ್ ಆಗಿಲ್ಲ. ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಯಾರಾದರೂ ಆರೋಪಗಳನ್ನು ಸಾಬೀತುಪಡಿಸಿದರೆ ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದರು.