ಮಂಗಳೂರು, ಮಾ 30 (DaijiworldNews/HR): ದ.ಕ.ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ 17,58,647 ಮತದಾರರಿದ್ದು, 8,59,899 ಪುರುಷರು, 8,98,132 ಮಹಿಳೆಯರು ಮತ್ತು 75 ತೃತೀಯಲಿಂಗಿಗಳಿದ್ದಾರೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 10 ರಂದು ಮತದಾನ ಮತ್ತು ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದರು.
ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಆರಾಧನೆ ಕೋಲ, ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ನಡೆದು ದುರುಪಯೋಗ, ಮತದಾರರ ಓಲೈಕೆ ಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇನ್ನು ಚುನಾವಣಾ ಪೂರ್ವ ತಪಾಸಣೆ ವೇಳೆ 10 ಲಕ್ಷ ರೂ., 200 ಲೀಟರ್ ಮದ್ಯ ಮತ್ತು 65 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದೇವೆ. ಪ್ರಚೋದನಕಾರಿ ಪೋಸ್ಟ್ಗಳ ಮೂಲಕ ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಪಡಿಸುವ ಪ್ರಯತ್ನಗಳನ್ನು ಮಾಡಬಹುದಾದ್ದರಿಂದ ನಾವು ಸಾಮಾಜಿಕ ಮಾಧ್ಯಮವನ್ನು ಸಹ ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದರು.
ಸಾರ್ವಜನಿಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ದೂರುಗಳನ್ನು ಸಲ್ಲಿಸಲು ಸಿ- ವಿಜಿಲ್ ಮೊಬೈಲ್ ಆಪ್ ಅಭಿವೃದ್ಧಿಪಡಿಸಲಾಗಿದೆ. ಈ ಆಪ್ ಮೂಲಕ ಜಿಲ್ಲೆಯ ಚುನಾವಣೆಗೆ ಸಂಬಂಧಿಸಿದ ಉಲ್ಲಂಘನೆ ಪ್ರಕರಣಗಳ ಬಗ್ಗೆ ಸಾರ್ವಜನಿಕರು -ಟೋ ಹಾಗೂ ವೀಡಿಯೋ ಮೂಲಕ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ತಿಳಿಸಿದರು.