ಉಡುಪಿ, ಏ 24 (DaijiworldNews/MS): ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತರಬೇತಿ ಸಂದರ್ಭದಲ್ಲಿ ಚುನಾವಣಾ ಕರ್ತವ್ಯ ಸಂಬಂಧಿತ ಕಾರ್ಯಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು, ಅವುಗಳ ಬಗ್ಗೆ ಇರುವ ಸಂದೇಹಗಳನ್ನು ಬಗೆಹರಿಸಿಕೊಂಡು, ಮತದಾನ ದಿನದಂದು ಯಾವುದೇ ಗೊಂದಲಗಳಿಗೆ ಒಳಗಾಗದಂತೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಉಡುಪಿಯ ಸೈಂಟ್ ಸಿಸಿಲಿ ವಿದ್ಯಾಸಂಸ್ಥೆಯಲ್ಲಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ತರಬೇತಿ ಸಮಯದಲ್ಲಿ ಇ.ವಿ.ಎಂ ಗಳ ಬಳಕೆ, ವಿವಿ ಪ್ಯಾಟ್ ಬಳಕೆ ಸೇರಿದಂತೆ , ಮತದಾನ ದಿನದಂದು ಚುನಾವಣಾ ಆಯೋಗದ ನಿರ್ದೇಶನಗಳ ಅನ್ವಯ ನಡೆಯುವ ಎಲ್ಲಾ ಪ್ರಕ್ರಿಯೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವ ಬಗ್ಗೆ ಸವಿವರವಾಗಿ ತಿಳಿದುಕೊಳ್ಳುವಂತೆ ಹಾಗೂ ಈ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ತರಬೇತುದಾರರಿಂದ ಅದನ್ನು ಬಗೆಹರಿಸಿಕೊಂಡು, ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.
ಚುನಾವಣಾ ಪ್ರಕ್ರಿಯೆಯ ಯಶಸ್ಸಿಗೆ ಮತಗಟ್ಟೆ ಮಟ್ಟದಲ್ಲಿ ನಡೆಯುವ ಕಾರ್ಯವು ಅತ್ಯಂತ ಪ್ರಮುಖವಾಗಿರುವುದರಿಂದ ,ಎಲ್ಲಾ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಮತ್ತು ಪರಸ್ಪರ ಸಮನ್ವಯದಿಂದ ತಮ್ಮ ಕರ್ತವ್ಯ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೀತಾ ಮತ್ತಿತರರು ಉಪಸ್ಥಿತರಿದ್ದರು.