ಉಡುಪಿ, ಮೇ 02 (DaijiworldNews/HR): ನಿಮ್ಮ ಹಿಂದು ವಿರೋಧಿ ನಿಲುವಿಗೆ ಧಿಕ್ಕಾರ. ಭಜರಂಗದಳ ಎನ್ನುವುದು ಸಮಾಜ ವಿರೋಧಿ ಸಂಘಟನೆಯಲ್ಲ. ಹಿಂದು ಸಮಾಜದ ರಕ್ಷಣೆಗಾಗಿ, ಗೋಮಾತೆಯ ಹಿತಕ್ಕಾಗಿ, ಹಿಂದು ಸೋದರಿಯರ ಮಾನ ಸಮ್ಮಾನ ಸಂರಕ್ಷಣೆಗಾಗಿ ಎಂಥ ತ್ಯಾಗಕ್ಕೂ ಸಿದ್ದವಾಗಿರುವ ಕಾರ್ಯಕರ್ತರ ಪಡೆ. ಮುಸ್ಲಿಂ ಓಲೈಕೆಗಾಗಿ ಭಜರಂಗದಳ ನಿಷೇಧಿಸುತ್ತೇವೆಂಬ ದಾಷ್ಟ್ಯವೇ ? ಎಂದು ಕಾಂಗ್ರೆಸ್ನ ಪ್ರಣಾಳಿಕೆಯ ವಿರುದ್ದ ಇಂಧನ ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರ ಕುರಿತು ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಅವರು, ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುವುದು ಸೇರಿದಂತೆ ಕಾನೂನು ಕ್ರಮ ತೆಗೆದುಕೊಳ್ಳುವ ವಿಚಾರವನ್ನು ಕಾಂಗ್ರೆಸ್ ಪ್ರಸ್ತಾಪಿಸಿದೆ. ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ನಾವು ಪಿಎಫ್ಐ ನಿಷೇಧ ಮಾಡಿದ್ದೇವೆಂಬ ಸಂಕಟ ಹಾಗೂ ದ್ವೇಷವನ್ನು ಭಜರಂಗದಳ ನಿಷೇಧದ ಮೂಲಕ ತೀರಿಸಿಕೊಳ್ಳಲು ಹೊರಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಭಜರಂಗ ದಳ ಹಾಗೂ ಪಿಎಫ್ಐನ್ನು ಒಂದೇ ತಕ್ಕಡಿಯಲ್ಲಿ ಅಳತೆ ಮಾಡುವ ಕಾಂಗ್ರೆಸಿಗರ ಮನಸು ರೋಗಗ್ರಸ್ಥವಾಗಿದೆ. ಪಿಎಫ್ಐ ಒಂದು ಭಯೋತ್ಪಾದಕ ಸಂಘಟನೆ ಎಂಬ ಕಾರಣಕ್ಕೆ ನಿಷೇಧ ಮಾಡಿದ್ದೇವೆ. ಭಜರಂಗದಳ ಹಿಂದು ಸಮಾಜ ಮತ್ತು ದೇಶ ಹಿತದ ಸಂಘಟನೆ. ದೇಶಪ್ರೇಮವನ್ನು ಕಾಂಗ್ರೆಸ್ ನಿಷೇಧಿಸುತ್ತದೆಯೇ ? ಎಂದು ವಾಗ್ದಾಳಿ ನಡೆಸಿದ್ದಾರೆ.