ಉಡುಪಿ, ಮಾ 29(SM): ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ರ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದೇಶ ಪಡೆದ ಎಲ್ಲಾ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಆಯೋಜಿಸಲಾಗಿದ್ದು, ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ತಪ್ಪಿದ್ದಲ್ಲಿ ಕಠಿಣ ಕ್ರಮ ಜರಗಿಸಲಾಗುವುದೆಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಮಾರ್ಚ್ 31 ರಂದು 118- ಬೈಂದೂರು ವಿಧಾನಸಭಾ ಕ್ಷೇತ್ರದ ಶೀರೂರು ಗ್ರೀನ್ ವ್ಯಾಲಿ ಇಂಟರ್ ನ್ಯಾಷನಲ್ ಸ್ಕೂಲ್, 119- ಕುಂದಾಪುರ ವಿಧಾನಸಭಾ ಕ್ಷೇತ್ರದ ಕುಂದಾಪುರ ಜೂನಿಯರ್ ಕಾಲೇಜು, 120- ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಗಿರಿ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆ, 121- ಕಾಪು ವಿಧಾನಸಭಾ ಕ್ಷೇತ್ರದ ಕಾಪು ಉಳಿಯಾರಗೋಳಿ ದಂಡತೀರ್ಥ ಪದವಿ ಪೂರ್ವ ಕಾಲೇಜು, 122- ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ಗಾಂಧಿ ಮೈದಾನ ಕ್ರೈಸ್ತ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದೆ.
ನೇಮಕಾತಿ ಆದೇಶ ಪಡೆದಿರುವ ಎಲ್ಲಾ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ಅವರ ನೇಮಕಾತಿ ಆದೇಶದಲ್ಲಿ ನಮೂದಿಸಿದ ಸ್ಥಳಗಳಲ್ಲಿ ಕಡ್ಡಾಯವಾಗಿ ತರಬೇತಿಗೆ ಹಾಜರಾಗಬೇಕು. ಮೌಲ್ಯಮಾಪನಕ್ಕೆ ಹಾಜರಾದ ಉಪನ್ಯಾಸಕರು ಮಾರ್ಚ್ 31ರ ತರಬೇತಿಯಿಂದ ವಿನಾಯಿತಿ ಪಡೆದು, ಏಪ್ರಿಲ್ 6ರಂದು ಉಡುಪಿಯ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿರುವ ತರಬೇತಿಗೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಿದ್ದಾರೆ.
ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆಯನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.