ಬೆಳ್ತಂಗಡಿ, ಮಾ30(SS): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪ್ರಚಾರ ಬೆಳ್ತಂಗಡಿಯಿಂದಲೇ ಆರಂಭಗೊಳ್ಳಲಿದ್ದು, ಜಿಲ್ಲೆಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನೆ ಖರ್ಗೆ, ಗುಲಾಂ ನಬಿಅಜಾದ್, ಸಿದ್ದರಾಮಯ್ಯ ಮೊದಲಾದ ನಾಯಕರು ಬಂದು ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಎಂದು ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ಕಾರ್ಯಕರ್ತರ ಮಾನಸಿಕ ಸ್ಥೈರ್ಯ ಕುಗ್ಗಿಸುವ ಸಲುವಾಗಿ ಬಿಜೆಪಿಯು ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡುತ್ತಿದೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರ, ನಾಯಕರ ಮನೆಗಳಿಗೆ ದಾಳಿ ಮಾಡಿಸುವ ಮೂಲಕ ಐಟಿ ಸರ್ಜಿಕಲ್ ಸ್ಟ್ರೈಕ್ ಆರಂಭಿಸಿದೆ ಎಂದು ಹೇಳಿದರು
ಮೋದಿ ಮತ್ತು ಅವರ ಹಿಂಬಾಲಕರು ಬಿಜೆಪಿಗರು ಅಕ್ರಮ ಆಸ್ತಿ ಸಂಪಾದಿಸಿದ್ದರೂ ಅವರ ರಕ್ಷಣೆಯಲ್ಲಿ ನಿರತರಾಗಿದ್ದಾರೆ. ನ್ಯಾಯಸಮ್ಮತ ಚುನಾವಣೆ ನಡೆಯಲು ಚುನಾವಣಾ ಆಯೋಗ ಮಧ್ಯ ಪ್ರವೇಶಿಸಬೇಕು. ಈ ಕುರಿತು ವಿವರಣೆ ಪಡೆಯುವಂತೆ ರಾಷ್ಟ್ರಪತಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಹೇಳಿದರು.
ದೇಶಾದ್ಯಂತ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ. ಎಂದು ಐವನ್ ಆಕ್ರೋಶ ವ್ಯಕ್ತಪಡಿಸಿದರು. ನಾವು ದಾಳಿ ಮಾಡಬಾರ ದೆಂದು ಎಲ್ಲೂ ಹೇಳಿಲ್ಲ. ಆದರೆ ಕೇಂದ್ರ ಸರಕಾರವು ಚುನಾವಣೆ ಸಂದರ್ಭ ದಾಳಿ ನಡೆಸಿ ಐಟಿಯವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿ ಕಾರಿದರು.